ಬಳ್ಳಾರಿ: ಆರ್ಥಿಕ ಸಂಕಷ್ಟ ಸೇರಿದಂತೆ ವ್ಯಕ್ತಿ ಜೀವನದಲ್ಲಿ ಬರುವ ವಿವಿಧ ಸಮಸ್ಯೆಗಳಿಂದಾದ ಒತ್ತಡ ಹಾಗೂ ಉದ್ವೇಗಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗದೆ ಯಾವುದೇ ಸಮಸ್ಯೆಯನ್ನು ಧೈರ್ಯವಾಗಿ ಎದುರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನಮ್ಮ ದೇಶದಲ್ಲಿ ವರ್ಷಕ್ಕೆ 1.73 ಲಕ್ಷ ಜನರು ಸಾವಿಗೀಡಾಗುತ್ತಿದ್ದು, ಪ್ರತಿ 11 ಸೆಕೆಂಡ್‌ಗಳಿಗೆ ಒಂದು ಸಾವು ಸಂಭವಿಸುತ್ತಿದೆ. ಇದಕ್ಕೆ ವ್ಯಕ್ತಿಯಲ್ಲಿ ಬರುವ ತೀವ್ರ ತರವಾದ ಆಲೋಚನೆಗಳು ಪ್ರಮುಖ ಕಾರಣವಾಗಿದೆ. ಅಂಥವರನ್ನು ಗುರುತಿಸಿ ಆಪ್ತ ಸಮಾಲೋಚನೆ ಮೂಲಕ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ ಎಂದು ಹೇಳಿದರು.
ಪ್ರತಿಯೊಬ್ಬರ ಜೀವನದಲ್ಲಿ ಅನೇಕ ಸಮಸ್ಯೆಗಳು ಬರುತ್ತವೆ. ಆದರೆ, ಆತ್ಮಹತ್ಯೆಯೇ ಎಲ್ಲದಕ್ಕೂ ಪರಿಹಾರವಲ್ಲ. ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಎದುರಿಸಬೇಕು. ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆಯಿಂದ ದೂರ ಉಳಿದು, ಭವಿಷ್ಯದ ದಿನಗಳನ್ನು ಕಟ್ಟಿಕೊಳ್ಳುವತ್ತ ಗಮನ ನೀಡಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಮಾತನಾಡಿ, ಮನೆಯಲ್ಲಿ ಕುಟುಂಬ ಸದಸ್ಯರ ಜತೆಗೂಡಿ ಸಮಸ್ಯೆಗಳ ಕುರಿತು ಮಾತನಾಡಿ, ಪರಿಹರಿಸಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಆತ್ಮಹತ್ಯೆ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕಷ್ಟಗಳು ಬಂದರೆ ಅವುಗಳನ್ನು ಕುಟುಂಬ ಸದಸ್ಯರಿಗೆ ತಿಳಿಸಬೇಕು. ಮಾಡುವ ತಪ್ಪು ತಿದ್ದಿಕೊಂಡು ಒಂದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ವೀರೇಂದ್ರ ಕುಮಾರ್ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮನೋಚೈತನ್ಯ ಕಾರ್ಯಕ್ರಮ ಹಮ್ಮಿಕೊಂಡು ಮಾನಸಿಕ ರೋಗಿಗಳಿಗೆ, ಸಣ್ಣ ಪುಟ್ಟ ಮಾನಸಿಕ ತೊಂದರೆ ಇರುವ ಮನೋರೋಗಿಗಳಿಗೆ ಅಪ್ತ ಸಮಾಲೋಚನೆ ಹಾಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಜಿಲ್ಲಾ ಮನೋರೋಗತಜ್ಞ ಡಾ. ನಂದಕಿಶೋರ್ ರೆಡ್ಡಿ ಮಾತನಾಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ ಭಾಗವಹಿಸಿದ್ದರು.ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಿಂದ ಆರಂಭವಾಗಿ ನೂತನ ಜಿಲ್ಲಾಡಳಿತ ಆವರಣಕ್ಕೆ ತಲುಪಿ ಪುನಃ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.