ಕಾಂಗ್ರೆಸ್ ಕಾರ್ಯಕರ್ತರಿಗೆ ಸಲಹೆ । ‘ಪಕ್ಷದ ನಡೆ ಕಾರ್ಯಕರ್ತರ ಕಡೆ’ ವಿಶೇಷ ಕಾರ್ಯಕ್ರಮ
ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು ಕಾರ್ಯಕರ್ತರು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಸಜ್ಜಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ, ನಗರ ಮತ್ತು ಗ್ರಾಮಾಂತರ ಮಂಡಲದ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಪಕ್ಷದ ನಡೆ ಕಾರ್ಯಕರ್ತರ ಕಡೆ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಚುನಾವಣೆಗಳು ಬರುತ್ತಿದ್ದು, ಕಾರ್ಯಕರ್ತರಲ್ಲಿ ಹುರುಪು ತುಂಬುವುದಕ್ಕಾಗಿ ಈ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಐದು ಉಚಿತ ಗ್ಯಾರಂಟಿಗಳಿಗೆ ವರ್ಷಕ್ಕೆ 57 ಸಾವಿರ ಕೋಟಿ ರು. ಖರ್ಚಾಗುತ್ತಿದೆ. ಬಿಜೆಪಿಯವರು ಮೂರು ಲಕ್ಷ ಕೋಟಿ ರು.ಸಾಲ ಹೊರಿಸಿ ಹೋಗಿದ್ದಾರೆ. ಇವೆಲ್ಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಭಾಯಿಸಿಕೊಂಡು ಭದ್ರಾ ಮೇಲ್ದಂಡೆಗೆ 2600 ಕೋಟಿ ರು. ಕೊಟ್ಟಿದ್ದಾರೆ ಎಂದರು.
ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ, 25 ವರ್ಷಗಳ ನಂತರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೆಂದರೆ ಕಾರ್ಯಕರ್ತರೇ ಕಾರಣ. ಐವತ್ತು ಸಾವಿರ ಮತಗಳ ಅಂತರದಿಂದ ನೀವು ನನ್ನನ್ನು ಗೆಲ್ಲಿಸಿದ್ದೀರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪಂಚ ಗ್ಯಾರಂಟಿಗಳಿಂದ ಬಡವರ ಜೀವನ ಸುಧಾರಣೆಯಾಗಿದೆ. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಬೆಲೆ ಏರಿಸಿದೆ ಎಂದು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸಿ ನಮ್ಮ ಪಕ್ಷದ ಬಗ್ಗೆ ಅಪ ಪ್ರಚಾರ ಮಾಡುತ್ತಿದೆ. ರಾಜ್ಯದಲ್ಲಿ ಎಲ್ಲಿಯೂ ಜನ ಆಕ್ರೋಶಗೊಂಡಿಲ್ಲ. ಪಕ್ಷದಲ್ಲಿ ಸ್ಥಾನಮಾನ ಸಿಗಲಿಲ್ಲವೆಂಬ ಮುನಿಸು ಬೇಡ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಸುದರ್ಶನ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಮಂಜಪ್ಪ, ಸಿ.ಟಿ.ಕೃಷ್ಣಮೂರ್ತಿ, ಎಚ್.ಸಿ.ನಿರಂಜನಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಮೋಕ್ಷ ರುದ್ರಸ್ವಾಮಿ, ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ಎಸ್.ಜಯಣ್ಣ, ಎಸ್ಟಿ ವಿಭಾಗದ ಅಧ್ಯಕ್ಷ ಮಂಜುನಾಥ್, ಪ್ರಕಾಶ್ ರಾಮನಾಯ್ಕ, ಹನೀಸ್, ಜಿ.ವಿ.ಮಧುಗೌಡ, ಮೋಹನ್ ಪೂಜಾರಿ, ಯು.ಲಕ್ಷ್ಮಿಕಾಂತ್ ಇದ್ದರು.