ವರುಣ ಕ್ಷೇತ್ರದಲ್ಲಿ ಬರ ಪರಿಹಾರ ಕಾರ್ಯ ಕೈಗೊಳ್ಳಿ

KannadaprabhaNewsNetwork |  
Published : Oct 01, 2026, 01:15 AM IST
66 | Kannada Prabha

ಸಾರಾಂಶ

ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ

ಕನ್ನಡಪ್ರಭ ವಾರ್ತೆ ನಂಜನಗೂಡುಮುಂಗಾರು ಮಳೆ ವೈಫಲ್ಯದಿಂದ ವರುಣ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ಬರಪೀಡಿತ ಗ್ರಾಮಗಳಲ್ಲಿ ತ್ವರಿತವಾಗಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಒತ್ತಾಯಿಸಿದರು.ವರುಣ ಕ್ಷೇತ್ರದ ಬರ ಪರಿಸ್ಥಿತಿ ಹಾಗೂ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಡಿಎಸ್ ವತಿಯಿಂದ ಬುಧವಾರ ನಂಜನಗೂಡಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಕೂಡಲೇ ಕ್ಷೇತ್ರದ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅಗತ್ಯ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಪಾವಧಿ ಬೆಳೆಗಳನ್ನು ಬೆಳೆಯಲು ರೈತರಿಗೆ ಅಗತ್ಯ ಅವಕಾಶ ಹಾಗೂ ನೆರವು ಕಲ್ಪಿಸಬೇಕು ಎಂದು ಆಗ್ರಹಿಸಿದರು.ವರುಣ ಕ್ಷೇತ್ರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯ ಆಗುತ್ತಿರುವುದರಿಂದ ರೈತರಿಗೆ ನೀರಾವರಿ ನಿರ್ವಹಣೆಗೆ ತೊಂದರೆಯಾಗಿದೆ. ಕಣ್ಣಾಮುಚ್ಚಾಲೆ ಆಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸರ್ಕಾರ ಹಾಗೂ ವಿದ್ಯುತ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.ವೃದ್ಧಾಪ್ಯ ವೇತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಕ್ಕೆ ಹಣದ ಕೊರತೆ ಎದುರಾಗಿರುವುದು ಆತಂಕಕಾರಿ ಸಂಗತಿ. ಜನಸಾಮಾನ್ಯರ ಅಗತ್ಯಗಳನ್ನು ಗಮನಿಸಿ ಸರ್ಕಾರ ಜನಪರ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದು ಸಾ.ರಾ. ಮಹೇಶ್ ಒತ್ತಾಯಿಸಿದರು.ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ‘ಉಳುವವನೇ ಭೂಮಿಯ ಒಡೆಯ’ ಎಂಬ ಕಾನೂನು ಜಾರಿಗೆ ತಂದಿದ್ದರು. ಅದೇ ರೀತಿ, ಒಂದು ಕುಟುಂಬಕ್ಕೆ ಇಂತಿಷ್ಟೇ ಭೂಮಿ ಇರಬೇಕು ಎಂಬ ಕಾನೂನು ಜಾರಿಗೆ ತರುವ ಅಗತ್ಯವಿದೆ. ಭೂಮಿ ಕೆಲವೇ ಕುಟುಂಬಗಳ ಕೈಯಲ್ಲಿ ಕೇಂದ್ರೀಕೃತವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸರ್ಕಾರದ ಬಳಿ ಹಣವಿಲ್ಲಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಅಶ್ವಿನ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ಹಲವು ವೈಫಲ್ಯಗಳಿಂದ ಜನಪರ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಸರ್ಕಾರದ ಬಳಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಜನಪರ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು ಎಂದು ಅವರು ಒತ್ತಾಯಿಸಿದರು. ಬೃಹತ್ ಪ್ರತಿಭಟನೆಇದಕ್ಕೂ ಮುನ್ನ ವಿಶ್ವೇಶ್ವರಯ್ಯ ವೃತ್ತದಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಉದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.ಪ್ರತಿಭಟನೆ ಬಳಿಕ ತಹಸೀಲ್ದಾರರ ಗ್ರೇಡ್-_ 2 ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ. ಮಹದೇವ್, ಜೆಡಿಎಸ್‌ ಮಾಜಿ ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ, ವರುಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಭಿಷೇಕ್ ಮಣೆಗಾರ, ಪ್ರೊ. ಸುಬ್ಬಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ ಮೂರ್ತಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಲಿತರಿಗೆ ದೇಗುಲ ಪ್ರವೇಶ ನಿರ್ಬಂಧ: ತಹಸೀಲ್ದಾರ್ ಭೇಟಿ
ಗ್ಯಾರಂಟಿ ಬಡವರ ಬದುಕಿನಲ್ಲಿ ಹೊಸ ಚೈತನ್ಯ ನೀಡಿವೆ: ಶಿವು ಚಂಗಾವರ