ನೆಲಮಂಗಲ: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಸಂಸದರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಆರೋಪಿಸಿದರು.
ಪೊಲೀಸ್ ಅಧಿಕಾರಿಗಳ ದುರ್ಬಳಕೆ: ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ಎನ್‌ಡಿಎ ಮೈತ್ರಿ ಕೂಟದ ನಾಯಕರ ವಿರುದ್ಧ ಹೆಚ್ಚು ಪ್ರಕರಣ ದಾಖಲಿಸುತ್ತಿದ್ದಾರೆ. ಎನ್‌ಡಿಎ ಮೈತ್ರಕೂಟದ ನಾಯಕನ್ನು ರಾಜಕೀಯವಾಗಿ ಕಟ್ಟು ಹಾಕಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಕೂಡಲೇ ಸಂಸದರ ವಿರುದ್ಧ ದಾಖಲಿಸಿರುವ ಪ್ರಕರಣ ತನಿಖೆ ಮಾಡಬೇಕು. ಉದ್ದೇಶ ಪೂರಕವಾಗಿ ಸೇರಿಸಿರುವ ಸಂಸದ ಡಾ.ಕೆ.ಸುಧಾಕರ್ ಹೆಸರು ಕೈ ಬಿಡಬೇಕು. ಇಲ್ಲವಾದಲ್ಲಿ ಚಿಕ್ಕಬಳ್ಳಾಪುರ ಲೋಕಾಸಭಾ ಕ್ಷೇತ್ರದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಗದೀಶ್‌ಚೌಧರಿ ತಿಳಿಸಿದರು.ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಬಿಜೆಪಿ ನಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ. ಇತ್ತೀಚೆಗೆ ಗುತ್ತಿಗೆದಾರನೊಬ್ಬ ಕಾಂಗ್ರೆಸ್ ಪಕ್ಷದ ಕೆಲ ನಾಯಕರ ಹೆಸರನ್ನು ನೇರವಾಗಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅದರೆ ಸಂಸದ ಡಾ.ಕೆ.ಸುಧಾಕರ್ ಅವರಿಗೆ ಪರಿಚಯವಿಲ್ಲದ ವ್ಯಕ್ತಿ ಅವರ ಹೆಸರು ಉಲ್ಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಮೇಲೆ ಎಫ್‌ಐಆರ್ ದಾಖಲಿಸುವುದು ಯಾವ ನ್ಯಾಯ. ಕಾಂಗ್ರೆಸ್ ಸರ್ಕಾರ ತಮ್ಮ ಸ್ವಾರ್ಥಕ್ಕಾಗಿ ಕಾನೂನನ್ನು ಹಾಗೂ ಪೊಲೀಸ್ ಇಲಾಖೆಯನ್ನು ಬೇರೆ ರೀತಿ ಬಳಕೆ ಮಾಡಿಕೊಳ್ಳುತ್ತಾರೆ ಎಂದರು.
ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ.ಬೃಂಗೇಶ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರಂಗನಾಥ್ ಬಾಬು, ನಗರ ಅದ್ಯಕ್ಷ ಕೇಶವಮೂರ್ತಿ, ವಿಶ್ವೇಶ್ವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಸಿ.ಅಶ್ವಥ್, ನಗರಸಭೆ ಹೆಚ್ಚುವರಿ ಸದಸ್ಯ ಅಂಜನಮೂರ್ತಿ, ಮುನಿರಾಜು, ಕೃಪಾನಂದ್, ಮುಖಂಡ ರಘು, ಅರುಣ್‌ಗೌಡ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.ಪೊಟೊ-9ಕೆ ಎನ್ ಎಲ್ ಎಮ್ 1-
ನೆಲಮಂಗಲ ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಮಾಜಿ ಶಾಸಕ ನಾಗರಾಜು, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್ ಇತರರಿದ್ದರು.