ಶಿರಸಿ: 2013ರಲ್ಲಿ ಮಹದಾಯಿ ಹೋರಾಟದ ಸಂದರ್ಭದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಶಿರಸಿ ನಗರದಲ್ಲಿ ಬಂಧಿಸಿ ಹುಬ್ಬಳ್ಳಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶಿರಸಿ: ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ತಾಲೂಕಿನ ದಾಸನಕೊಪ್ಪದ ಶಿರಸಿ- ಹಾನಗಲ್ಲ ರಾಷ್ಟ್ರೀಯ ಹೆದ್ದಾರಿ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರ ಕಿರವತ್ತಿ ಅವರ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ರೈತ ಪ್ರತಿಭಟನಾಕಾರರು ರೈತರ ಬೇಡಿಕೆಗಳನ್ನು ಈಡೇರಿಸದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ನಮ್ಮ ಮನವಿಯನ್ನು ಸ್ವೀಕರಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟು ಹಿಡಿದು ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.ನಂತರ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಕೈಬಿಡುವಂತೆ ತಹಸೀಲ್ದಾರ್ ಪಟ್ಟ ರಾಜಗೌಡ ಅವರು, ಪ್ರತಿಭಟನಾಕಾರರಿಗೆ ಮನವಿ ಮಾಡಿದರು. ಪ್ರತಿಭಟನೆಯಿಂದ ಹಿಂದೆ ಸರಿಯದೇ ಹೆದ್ದಾರಿ ತಡೆ ಮುಂದುವರಿಸಲು ಕುಳಿತಾಗ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ತಹಸೀಲ್ದಾರ್ ಪುಟ್ಟರಾಜ ಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಪಿಐ ಸಂಪತ್, ಬನವಾಸಿ ಪಿಎಸ್ಐ ಎಂ.ಜಿ. ಕುಂಬಾರ ಹಾಗೂ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.