ಮಂಡ್ಯ ಜಿಲ್ಲೆಯಲ್ಲಿ ಸುಮಾರು 37 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಒಣಗುತ್ತಿದೆ. ಕೆಆರ್‌ಎಸ್‌ನಲ್ಲಿ 80 ಅಡಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. 70 ಅಡಿ ಇದ್ದ ಸಂದರ್ಭದಲ್ಲೂ ಬೆಳೆ ರಕ್ಷಣೆಗಾಗಿ ನೀರು ಹರಿಸಿರುವ ಉದಾಹರಣೆಗಳು ಇವೆ. ಹೀಗಿರುವಾಗ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೆಳೆ ರಕ್ಷಣೆಗೆ ಹಿಂದೇಟು ಹಾಕುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ಕೃಷ್ಣರಾಜಸಾಗರ ಜಲಾಶಯದಿಂದ ಒಂದು ಕಟ್ಟು ನೀರು ಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆ ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದರು.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು, ರಾಜ್ಯ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಕೆಲ ಕಾಲ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದರು.
ಜಿಲ್ಲೆಯಲ್ಲಿ ಸುಮಾರು 37 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಒಣಗುತ್ತಿದೆ. ಕೆಆರ್‌ಎಸ್‌ನಲ್ಲಿ 80 ಅಡಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. 70 ಅಡಿ ಇದ್ದ ಸಂದರ್ಭದಲ್ಲೂ ಬೆಳೆ ರಕ್ಷಣೆಗಾಗಿ ನೀರು ಹರಿಸಿರುವ ಉದಾಹರಣೆಗಳು ಇವೆ. ಹೀಗಿರುವಾಗ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೆಳೆ ರಕ್ಷಣೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
6ನೇ ಹಂತದ ಯೋಜನೆಗೆ ವಿರೋಧ:
ಬೆಂಗಳೂರಿಗೆ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆ ಕೈಗೊಂಡಿರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಂಗಳೂರಿನಲ್ಲಿದ್ದ ನೀರಿನ ಮೂಲವಾಗಿದ್ದ ಎಲ್ಲ ಕೆರೆಗಳನ್ನೂ ಮುಚ್ಚಿ ಬಡಾವಣೆಗಳನ್ನಾಗಿ ಮಾಡಲಾಗಿದೆ. ಇದೀಗ ಅಲ್ಲಿನ ಜನರಿಗೆ ನೀರು ಒದಗಿಸಲು ಕೃಷ್ಣರಾಜಸಾಗರ ಜಲಾಶಯದಿಂದ ನೀರು ಕೊಂಡೊಯ್ಯಲು ಸರ್ಕಾರ ಹುನ್ನಾರ ನಡೆಸುತ್ತಿದೆ. ಯಾವುದೇ ಕಾರಣಕ್ಕೂ 6ನೇ ಹಂತದ ಯೋಜನೆ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.
ಪ್ರತಿ ಟನ್ ಕಬ್ಬಿಗೆ ಸರ್ಕಾರ 50 ರು. ಪ್ರೋತ್ಸಾಹ ಧನ ನೀಡಬೇಕು ಎಂದು ಕಾರ್ಖಾನೆಯವರಿಗೆ ತಾಕೀತು ಮಾಡಿದೆ. ಆದರೆ, ಇದನ್ನು ಪ್ರಶ್ನಿಸಿ ಕಾರ್ಖಾನೆ ಮಾಲೀಕರು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಇದು ಸರಿಯಾದ ಕ್ರಮವಲ್ಲ. ತಕ್ಷಣ ಸರ್ಕಾರ ನಿಗದಿ ಮಾಡಿರುವ ಪ್ರೋತ್ಸಾಹ ಧನವನ್ನು ರೈತರಿಗೆ ವಿತರಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಲಿಂಗಪ್ಪಾಜಿ, ವಿನೋದ್, ಉಮೇಶ್, ಶಂಕರ್, ಗದ್ದಯ್ಯ, ತಮ್ಮೇಗೌಡ, ಸಿದ್ದೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.