ಕನ್ನಡಪ್ರಭ ವಾರ್ತೆ ಹನೂರು
ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಚಿರತೆ ಕುಳಿತಿರುವುದನ್ನು ಭಕ್ತಾದಿಗಳು ಹಾಗೂ ವಾಹನ ಸವಾರರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಪಾದಯಾತ್ರಿಕ ಮೃತಪಟ್ಟಿದ್ದಾನೆ. ಈ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು, ಘಟನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಕಾರಣರಾಗಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ನಡೆಯುವ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಾರೆ. ಚಿರತೆ ದಾಳಿಯಿಂದ ಪಾದಯಾತ್ರಿಕ ಮೃತಪಟ್ಟಿರುವುದರಿಂದ ಈಗಾಗಲೇ ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಪ್ರಾರಂಭವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.ಕಾಡಂಚಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ನಿರಂತರವಾಗಿ ನಡೆಯುತ್ತಿರುವುದರಿಂದ ಪೊಲೀಸ್ ಹಾಗೂ ಅಬಕಾರಿ ಇಲಾಖೆಯವರು ಅಕ್ರಮ ಮಾರಾಟಕ್ಕೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್, ಹೆಚ್ಚುವರಿ ಪೊಲೀಸ್ ಅಧಿಕಾರಿ ಶಶಿಧರ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಚರ್ಚೆ ನಡೆಸಿದರು.ಪ್ರತಿಭಟನೆ ಹಿನ್ನೆಲೆ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಅಧಿಕಾರಿಗಳ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.
ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ರಾಮಾಪುರ, ಚಿಕ್ಕರಾಜ ಶೆಟ್ಟಿ, ರೈತ ಸಂಘದ ಮುಖಂಡರು ಹಾಜರಿದ್ದರು.