ಬರ ಘೋಷಣೆ, ಬೆಳೆ ಪರಿಹಾರಕ್ಕಾಗಿ ರೈತ ಸಂಘ ಪ್ರತಿಭಟನೆ

KannadaprabhaNewsNetwork |  
Published : Sep 22, 2026, 01:45 AM IST
21ಎಚ್ಎಸ್ಎನ್14 :  | Kannada Prabha

ಸಾರಾಂಶ

ಜಿಲ್ಲೆಯ ಎಂಟು ತಾಲೂಕುಗಳಲ್ಲಿರುವ ಕೆರೆಗಳಿಗೆ ತುರ್ತಾಗಿ ನೀರು ತುಂಬಿಸುವ ಕ್ರಮ ಕೈಗೊಳ್ಳಬೇಕು. ಏತ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುವುದರ ಜೊತೆಗೆ ಎತ್ತಿನಹೊಳೆ ಯೋಜನೆಯ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕೆರೆಗಳನ್ನು ತುಂಬಿಸಬೇಕು. ಇದರಿಂದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಒಂದಷ್ಟು ಪರಿಹಾರ ದೊರೆಯಲಿದೆ ಎಂದರು.

ಕನ್ನಡಪ್ರಭವಾರ್ತೆ, ಹಾಸನ

ಮಳೆ ಕೊರತೆ ನಡುವೆ ಬೆಳೆಗಳಿಗೆ ಬಾಧಿಸುತ್ತಿರುವ ವಿವಿಧ ರೋಗ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಹಾಸನ ಜಿಲ್ಲೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆ ಎಲ್ಲಾ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ಸಮರ್ಪಕ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಜಿಲ್ಲೆ ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಕಂಡಿವೆ. ಬೆಳೆಗೆ ವಿವಿಧ ರೋಗ ಕಾಣಿಸಿಕೊಂಡಿದ್ದು, ಮತ್ತೊಂದೆಡೆ ಕಾಡುಪ್ರಾಣಿಗಳಿಂದ ಬೆಳೆ ರಕ್ಷಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ. ನವಿಲು ಹಾಗೂ ಮುಳ್ಳುಹಂದಿ ಜಮೀನಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿದ್ದರೂ, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸಂಬಂಧಪಟ್ಟ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.ಹಾಸನ ತಾಲೂಕನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು. ಚನ್ನರಾಯಪಟ್ಟಣ ತಾಲೂಕಿನಲ್ಲಿ ಕಬ್ಬು, ಜೋಳ, ಶುಂಠಿ, ರಾಗಿ ಹಾಗೂ ತೆಂಗು ಸೇರಿ ವಿವಿಧ ಬೆಳೆಗಳಿಗೆ ರೋಗಬಾಧೆ ಕಾಣಿಸಿಕೊಂಡಿದೆ. ಕಬ್ಬಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಆದ್ದರಿಂದ ಕಬ್ಬಿಗೆ ಪ್ರತಿ ಟನ್‌ಗೆ ೫,೫೦೦ ಬೆಲೆ ನಿಗದಿಪಡಿಸಬೇಕು. ಅರಸೀಕೆರೆ ತಾಲೂಕಿನಲ್ಲಿ ತೆಂಗಿನ ಮರಗಳಿಗೆ ನುಸಿ ಹಾಗೂ ಸೋರುವಿಕೆ ಸೇರಿದಂತೆ ವಿವಿಧ ರೋಗಗಳು ಕಾಣಿಸಿಕೊಂಡು ಮರಗಳು ನಾಶವಾಗುತ್ತಿವೆ. ಹೀಗಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಅರಸೀಕೆರೆ ತಾಲೂಕನ್ನೂ ಬರಪೀಡಿತವೆಂದು ಘೋಷಿಸಬೇಕು. ಅಂತೆಯೇ ಬೇಲೂರು, ಅರಕಲಗೂಡು, ಹೊಳೆನರಸೀಪುರ, ಆಲೂರು-ಸಕಲೇಶಪುರದಲ್ಲೂ ಬೆಳೆ ನಷ್ಟವಾಗಿದೆ. ಹಾಗಾಗಿ ಈ ಎಲ್ಲಾ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಎಂಟು ತಾಲೂಕುಗಳಲ್ಲಿರುವ ಕೆರೆಗಳಿಗೆ ತುರ್ತಾಗಿ ನೀರು ತುಂಬಿಸುವ ಕ್ರಮ ಕೈಗೊಳ್ಳಬೇಕು. ಏತ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುವುದರ ಜೊತೆಗೆ ಎತ್ತಿನಹೊಳೆ ಯೋಜನೆಯ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕೆರೆಗಳನ್ನು ತುಂಬಿಸಬೇಕು. ಇದರಿಂದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಒಂದಷ್ಟು ಪರಿಹಾರ ದೊರೆಯಲಿದೆ ಎಂದರು.

ನಾಲ್ಕು ಎಕರೆ ಒಳಗಿನ ಜಮೀನಿನಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಗರ್‌ಹುಕುಂ ಸಾಗುವಳಿ ಹಕ್ಕುಗಳನ್ನು ತುರ್ತಾಗಿ ಮಂಜೂರು ಮಾಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಸಣ್ಣ ರೈತರಿಗೆ ಅನಗತ್ಯ ಕಿರುಕುಳ ನೀಡಬಾರದು. ರೈತರ ಜಮೀನು ಮತ್ತು ಸಾಗುವಳಿ ವಿಚಾರದಲ್ಲಿ ಅಧಿಕಾರಿಗಳಿಂದ ತೊಂದರೆ ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದರು. ರೈತರ ಬೆಳೆ ನಷ್ಟದ ವಾಸ್ತವಿಕ ಸಮೀಕ್ಷೆ ನಡೆಸಿ ಪರಿಹಾರ ಬಿಡುಗಡೆ ಮಾಡುವುದು, ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸುವುದು, ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ರೈತರ ಸಾಲದ ಮೇಲಿನ ಒತ್ತಡ ತಡೆಯುವುದು ಸೇರಿದಂತೆ ಎಲ್ಲ ಬೇಡಿಕೆಗಳನ್ನು ಸರ್ಕಾರ ತುರ್ತಾಗಿ ಈಡೇರಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ರಾಜ್ಯ ಸಂಚಾಲಕ ಮೊಹಮ್ಮದ್ ಸಾದಿಕ್, ಜಿಲ್ಲಾ ಕಾರ್ಯದರ್ಶಿ ವಿಠಲ್, ತಾಲೂಕು ಅಧ್ಯಕ್ಷ ಹೆಚ್.ಆರ್. ಸಮೀವುಲ್ಲಾ, ಜಯಣ್ಣ, ತಿಮ್ಮಣ್ಣ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಬಸ್ ಗ್ಯಾರಂಟಿ ಇಲ್ಲ.. ಖಾಸಗಿ ಬಸ್‌ಗೆ ಕಾಸಿಲ್ಲ!
ಇಂದು ಗಣೇಶ ವಿಸರ್ಜನೆ: ಬಿಗಿ ಬಂದೋಬಸ್ತ್‌