ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮೇಲುಕೋಟೆ ಕ್ಷೇತ್ರದ ಶಾಸಕ ಹಾಗೂ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ರೈತ ಸಂಘವನ್ನು ಬೆಂಬಲಿಸಿ ವಿವಿಧ ಸಂಘಟನೆಗಳ ಮುಖಂಡರು ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿದರು.
ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ದರ ನಿಗದಿ, ಪ್ರತಿಯೊಂದು ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು ಎಂದು ರೈತರು ಪಟ್ಟು ಹಿಡಿದರು ಜೊತೆಗೆ ತೀವ್ರ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಕೃಷಿ ಸಾಲವನ್ನು ಕೂಡಲೇ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿದರು.ಪ್ರತಿಭಟನೆ ತೀವ್ರತೆ ಗಮನಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗಣಂಗೂರು ಟೋಲ್ ಸುತ್ತಮುತ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ನೇತೃತ್ವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಬಿಗಿ ಭದ್ರತೆ ಒದಗಿಸಿದ್ದರು.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ತಮ್ಮ ವಾಹನದಲ್ಲಿನ ಧ್ವನಿವರ್ಧಕದ ಮೂಲಕ ರೈತರನ್ನು ಸಮಾಧಾನಪಡಿಸಲು ಮುಂದಾದರು. ಸಚಿವರು ಸ್ಥಳಕ್ಕೆ ಆಗಮಿಸಿ ಅವರ ಮಾತುಗಳನ್ನು ಆಲಿಸಿ ಪರಿಹಾರವೇನು ಎಂಬುದನ್ನು ನೋಡೋಣ, ಅಲ್ಲಿಯವರೆಗೆ ಶಾಂತಿಯುತ ಹೋರಾಟ ನಡೆಸೋಣ ಎಂದು ಪ್ರತಿಭಟನಕಾರರಿಗೆ ಮನವಿ ಮಾಡಿದರು. ಆದರೆ ಆಕ್ರೋಶಗೊಂಡ ರೈತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಪೊಲೀಸರ ಮನವಿಯನ್ನು ಲೆಕ್ಕಿಸದೆ ಬ್ಯಾರಿಕೇಡ್ ಹಾಗೂ ತಂತಿ ಬೇಲಿಗಳನ್ನು ಮುರಿದುಕೊಂಡು ಏಕಾಏಕಿ ಹೆದ್ದಾರಿಗೆ ನುಗ್ಗಿ ಟೋಲ್ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಸಚಿವ ಎನ್ ಚಲುವರಾಯಸ್ವಾಮಿ, ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿ ಇತರೆ ಅಧಿಕಾರಿಗಳು ಆಗಮಿಸಿ ರೈತರನ್ನು ಸಮಾಧಾನ ಪಡಿಸಿ ಮಾತನಾಡಿದರು.
ಹೆದ್ದಾರಿಯಲ್ಲಿ ಟೋಲ್ ಪ್ಲಾಜಾ ತಡೆದು, ರಸ್ತೆ ತಡೆ ನಡೆಸುತ್ತಿದ್ದ ರೈತರ ಬಳಿ ಮನವಿ ಪತ್ರ ಸ್ವೀಕರಿಸಿದ ಸಚಿವ ಎನ್.ಚಲುವರಾಯಸ್ವಾಮಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.