ನರಗುಂದ: ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಗೋವಿನ ಜೋಳ ಖರೀದಿ ಮಾಡಲು ಸರ್ಕಾರ ಬೆಂಬಲ ಬೆಲೆ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಆಗ್ರಹಿಸಿದರು.
ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕೊಣ್ಣೂರ ಹೋಬಳಿ ಮಟ್ಟದ ಎಲ್ಲ ಗ್ರಾಮಗಳ ರೈತರು ಹಾಗೂ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ಶನಿವಾರ ಹುಬ್ಬಳ್ಳಿ-ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಆನಂತರ ಅವರು ಮಾತನಾಡಿದರು. ರೈತರು ಗೋವಿನಜೋಳ ಬೆಳೆಗೆ ಪ್ರತಿ ಎಕರೆಗೆ ₹30 ಸಾವಿರ ಖರ್ಚು ಮಾಡಿದ್ದಾರೆ. ಆದರೆ ಅತಿವೃಷ್ಟಿಯಿಂದ ಬೆಳೆಹಾನಿಯಾಗಿದೆ. ಉಳಿದ ಬೆಳೆ ಮಾರುಕಟ್ಟೆಗೆ ತಂದರೆ ಬೆಲೆ ಕುಸಿತವಾಗಿದೆ. ಅನ್ನದಾತರು ತೊಂದರೆಯಲ್ಲಿದ್ದಾರೆ. ಸರ್ಕಾರ ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿ ಮಾಡಿದ ₹2400 ಬೆಲೆಯೊಂದಿಗೆ ರಾಜ್ಯ ಸರ್ಕಾರ ₹600 ನೀಡಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ್ ಮಾತನಾಡಿ, ತಾಲೂಕಿನ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡು 2 ತಿಂಗಳು ಗತಿಸಿದರೂ ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡದೆ ಅನ್ಯಾಯ ಮಾಡುತ್ತದೆ ಎಂದು ಹೇಳಿದರು. ಸರ್ಕಾರಕ್ಕೆ ಇನ್ನೂ ಕಾಲ ಮಿಂಚಿಲ್ಲ, ಬೇಗ ಬೆಳೆ ಪರಿಹಾರ, ಬೆಳೆ ವಿಮಾ ಬಿಡುಗಡೆ ಮಾಡಬೇಕು ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಹೇಳಿದರು.ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಈ ದೇಶದಲ್ಲಿ ಅನ್ನದಾತರು ಅನ್ನ ಬೆಳೆಯದಿದ್ದರೆ ದೊಡ್ಡ ಅನಾಹುತವಾಗುತ್ತದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬೆಳೆದ ಪ್ರತಿಯೊಂದು ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿ ಅನ್ನದಾತರಿಗೆ ಸ್ಪಂದಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ಶ್ರೀಶೈಲ ತಳವಾರ ಮನವಿ ಸ್ವೀಕರಿಸಿದರು. ತಾಲೂಕು ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ನಾಗೇಶ ಅಪ್ಪೋಜಿ, ವಿಠ್ಠಲ ಮುಧೋಳೆ, ಮುತ್ತು ಯಾಲಿಗಾರ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಬಿ. ಯಲ್ಲಪ್ಪಗೌಡ್ರ, ಟಿ.ಬಿ. ಶಿರಿಯಪ್ಪಗೌಡ್ರ, ಎನ್.ಕೆ. ಸೋಮಾಪುರ, ಎಸ್.ಆರ್. ಸಾಲಿಗೌಡ್ರ, ನೇತಾಜಿಗೌಡ ಕೆಂಪನಗೌಡ್ರ, ಬಿ.ಎಂ. ಕೊರೆಗನ್ನವರ, ಟಿ.ಟಿ. ವಾಸನ, ಟಿ.ಬಿ. ವಾಸನ, ಎಸ್.ಎ. ವಾಲಿ ಇದ್ದರು.