ನರಗುಂದ: ರಾಜ್ಯ ಸರ್ಕಾರವು ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿನ ಬೆಲೆ ನಿಗದಿ ಮಾಡಬೇಕೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಆಗ್ರಹಿಸಿದರು.
ಬುಧವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆಯ ಆಶ್ರಯದಲ್ಲಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿ ನಂತರ ಮಾತನಾಡಿ, ರಾಜ್ಯದಲ್ಲಿ ಸದ್ಯ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಪ್ರತಿವರ್ಷ ಲಕ್ಷಾಂತರ ಟನ್ ಬೆಳೆಯುತ್ತಿರುವ ರೈತರಿಗೆ ಕಬ್ಬಿನ ಬೆಲೆ ಯೋಗ್ಯ ಇಲ್ಲದ್ದರಿಂದ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಈ ಹಿಂದೆ ಹಲವಾರು ಬಾರಿ ರಾಜ್ಯ ರೈತ ಸಂಘಟನೆಗಳು, ಕಬ್ಬು ಬೆಳೆಗಾರರ ಸಂಘದಿಂದ ಸರ್ಕಾರಕ್ಕೆ ಕಬ್ಬಿಗೆ ಯೋಗ್ಯ ಬೆಲೆ ನಿಗದಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲವೆಂದು ಆರೋಪಿಸಿದರು.
ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆದ ಬೆಳೆಗಾರರು ಹಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಇನ್ನು ಕಾಲ ಮಿಂಚಿಲ್ಲ. ಹೋರಾಟ ರಾಜ್ಯ ವ್ಯಾಪ್ತಿ ಹರಡುವ ಮುನ್ನ ಎಚ್ಚೆತ್ತು ಕಬ್ಬನ್ನು ಮಹಾರಾಷ್ಟ್ರ ಮಾದರಿಯಲ್ಲಿ ಬೆಲೆ ನಿಗದಿ ಮಾಡಿ ಕಬ್ಬು ಖರೀದಿ ಮಾಡಬೇಕು ಎಂದರು.ತಹಸೀಲ್ದಾರ್ ಶ್ರೀಶೈಲ ತಳವಾರ ಅವರು ರೈತರ ಮನವಿ ಸ್ವೀಕರಿಸಿ ಸರ್ಕಾರಕ್ಕೆ ಮನವಿ ರವಾನೆ ಮಾಡಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಶೇಖರಗೌಡ ಪೊಲೀಸಪಾಟೀಲ, ಬಸಯ್ಯ ಹೊರಗಿನಮಠ, ಹನುಮಂತಗೌಡ ಭೂಸನ್ನವರ, ಶಾಲಗೌಡ ಬಾಳಗೌಡರ, ಕುಮಾರಗೌಡ ಕಪ್ಲ, ಮಹಾಂತೇಶ ಚಿನವಾಳರ, ಯಂಕಪ್ಪ ಕಲ್ಲಾಪೂರ ಮುಂತಾದವರು ಇದ್ದರು.8ರಂದು ಕನಕದಾಸರ ಜಯಂತಿ ಆಚರಣೆ
ಗದಗ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತಿ ಕಾರ್ಯಕ್ರಮ ನ. 8ರಂದು ಬೆಳಗ್ಗೆ 9ಕ್ಕೆ ನಗರದ ಹಾತಲಗೇರಿ ನಾಕಾದ ಕನಕದಾಸರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯ ವಿಕೇಂದ್ರೀಕರಣ ಯೋಜನೆ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಇತರರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.