ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಶಾಂತಿನಗರದ ಹೇಮಾವತಿ ವಿಭಾಗೀಯ ಕಚೇರಿ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಜಲಾಶಯ ಅಚ್ಚುಕಟ್ಟು ವ್ಯಾಪ್ತಿ ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ತಕ್ಷಣ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವರುಣನ ಅವಕೃಪೆಯಿಂದ ರೈತರು ಸಾಲ ಮಾಡಿ ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ಒಣಗುತ್ತಿವೆ. ಸದ್ಯ ಆಶಾದಾಯಕವಾಗಿ ಮಳೆಯಾಗಿದೆ. ಹೇಮಾವತಿ ಜಲಾಶಯ ತುಂಬುವ ಹಂತ ತಲುಪಿದೆ. ಆದರೂ, ಅಧಿಕಾರಿಗಳು ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಿ ರೈತರ ಹಿತ ಕಾಯುತ್ತಿಲ್ಲ ಎಂದು ದೂರಿದರು.ನಾಲೆಗಳಿಗೆ ನೀರು ಹರಿಸುವ ಜತೆಗೆ ಜಲಾಶಯದ ವ್ಯಾಪ್ತಿಗೆ ಬರುವ ಎಲ್ಲಾ ಕೆರೆ- ಕಟ್ಟೆಗಳನ್ನು ತುಂಬಿಸುವ ಮೂಲಕ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆದರೆ ಈ ಕೆಲಸ ಆಗುತ್ತಿಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವೈ.ಪಿ.ಮಂಜುನಾಥ್, ಕಾರ್ಯದರ್ಶಿ ಡಾಮಡಹಳ್ಳಿ ಅಶೋಕ್, ಮುಖಂಡರಾದ ಮುರುಳೀಧರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.