ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಿಂದ ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲಕ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗುತ್ತ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಮಾವೇಶದಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎ.ಎಂ.ಮಹೇಶ್ ಪ್ರಭು ಮಾತನಾಡಿ ಕಳೆದ ವರ್ಷವೂ ೩೭ ದಿನಗಳ ಕಾಲ ಆಹೋರಾತ್ರಿ ಧರಣಿ ನಡೆಸಲಾಗಿತ್ತು.ಈ ವರ್ಷವೂ ರೈತರ ಬೇಡಿಕೆಗಳು ಈಡೇರದ ಕಾರಣ ಕಳೆದ ೫೩ ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ ಎಂದರು.ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ಚಳುವಳಿಗೆ ಸ್ಪಂದಿಸಿದ ಜಿಲ್ಲಾಡಳಿತದ ವಿರುದ್ಧ ರಾಜ್ಯ ರೈತಸಂಘದ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ದೊಡ್ಡ ಮಟ್ಟದಲ್ಲಿ ಚಳುವಳಿ ನಡೆಸಲಾಗಲು ಸದ್ಯದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಕಳೆದ ವರ್ಷದಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ೩೭ ದಿನಗಳ ಕಾಲ ಆಹೋರಾತ್ರಿ ಧರಣಿ ನಡೆಸಲಾಗಿತ್ತು.ಅಂದು ಸಚಿವ ಈಶ್ವರ್ ಖಂಡ್ರೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರೂ, ಇಂದಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಮೈಸೂರು ಜಿಲ್ಲಾ ರೈತಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ಬರುವ ರಾಜಕಾರಣಿಗಳು, ನಂತರ ಜನರ ಸಮಸ್ಯೆಗಳನ್ನು ಆಲಿಸುವುದಿಲ್ಲ ಎಂದು ಟೀಕಿಸಿದರು.
ರೈತ ಮುಖಂಡರಾದ ಕೆಂಪೂಗೌಡ, ಕೆ.ಮಲ್ಲಯ್ಯ, ಮಹೇಶ್ ಕುಮಾರ್, ನೇತ್ರಾವತಿ, ಹೊಸೂರು ಕುಮಾರ್, ವೆಂಕಟಚಲ, ಸೋಮಶೇಖರ್, ಮಹದೇವ್, ಮಲ್ಲಣ್ಣ, ಪಳನಿಸ್ವಾಮಿ, ಶಿವಣ್ಣಮಲ್ಲಯ್ಯನಪುರ, ಬಸಮ್ಮ,ಕನಕಮ್ಮ ಕೋಡಹಳ್ಳಿ ಮಹದೇವಪ್ರಸಾದ್, ರಘು, ಪ್ರವೀಣ್, ರೈತ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.