ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ

KannadaprabhaNewsNetwork |  
Published : Jun 30, 2026, 01:45 AM IST
29ಕೆಎಂಎನ್ ಡಿ11 | Kannada Prabha

ಸಾರಾಂಶ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ಈ ಭಾಗದ ನಾಲ್ಕೂ ಜಲಾಶಯಗಳಲ್ಲಿ ನೀರಿನ ಸಂಗ್ರಹವೂ ಕುಸಿದಿದೆ. ಆದರೆ, ಇರುವ ನೀರನ್ನು ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಉಪಯೋಗಿಸಿಕೊಳ್ಳಬಹುದು. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಒಣಗುತ್ತಿರುವ ಬೆಳೆಗಳ ರಕ್ಷಣೆ, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಸೇರಿದ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು. ನಂತರ ನೀರಾವರಿ ಇಲಾಖೆ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ಈ ಭಾಗದ ನಾಲ್ಕೂ ಜಲಾಶಯಗಳಲ್ಲಿ ನೀರಿನ ಸಂಗ್ರಹವೂ ಕುಸಿದಿದೆ. ಆದರೆ, ಇರುವ ನೀರನ್ನು ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಉಪಯೋಗಿಸಿಕೊಳ್ಳಬಹುದು. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ಬೆಳೆದು ನಿಂತಿರುವ ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಭತ್ತ ಮತ್ತು ಕಬ್ಬಿಗೆ ನೀರಿನ ಅಗತ್ಯವಿದೆ. ರೇಷ್ಮೆ, ತೆಂಗು ಇತರೆ ಬೆಳೆಗಳೂ ಸಹ ಒಣಗುತ್ತಿವೆ. ಇವುಗಳ ರಕ್ಷಣೆಗೆ ನೀರಿನ ಅಗತ್ಯವಿದೆ ಎಂದು ಆಗ್ರಹಿಸಿದರು.

ಏಕ ಕಾಲದಲ್ಲಿ ಜಿಲ್ಲೆಯ ಐದೂ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭವಾಗಬೇಕಿದೆ. ಕಬ್ಬಿನ ಬೆಳೆಗೆ ಇನ್ನೂ ಸ್ವಲ್ಪ ಪ್ರಮಾಣದಲ್ಲಿ ನೀರಿನ ಅವಶ್ಯಕತೆ ಇದೆ. ಜಿಲ್ಲೆಯ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಪರಿತಪಿಸುತ್ತಿದ್ದಾರೆ. ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾದರೆ ರೈತರು ಮತ್ತಷ್ಟು ತೊಂದರೆಗೆ ಸಿಲುಕುವ ಸಾಧ್ಯತೆಗಳಿವೆ. ಈ ಎಲ್ಲ ಅಂಶಗಳನ್ನೂ ಗಮನದಲ್ಲಿಟ್ಟುಕೊಂಡು ತಕ್ಷಣದಿಂದಲೇ ನಾಲೆಗಳಲ್ಲಿ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಬರಗಾಲದ ಪರಿಸ್ಥಿತಿ ಬಂದಂತಿದೆ. ಆದ್ದರಿಂದ ಕೂಡಲೇ ಜಿಲ್ಲೆಯ ರೈತರ ನೆರವಿಗೆ ಬರಲು ಕೃಷ್ಣರಾಜಸಾಗರ ಜಲಾಶಯದಿಂದ ತಕ್ಷಣದಿಂದಲೇ ನಾಲೆಗಳಲ್ಲಿ ನೀರು ಹರಿಸುವ ಮೂಲಕ ಜಿಲ್ಲೆಯ ಸಮಸ್ತ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಎಸ್. ಮಂಜೇಶ್‌ಗೌಡ, ಶಿವಳ್ಳಿ, ಚಂದ್ರಶೇಖರ್, ಕೀಲಾರ ಸೋಮಶೇಖರ್, ಜವರೇಗೌಡ, ಸುರೇಶ್, ನಾಗರಾಜು, ಕರಿಯಪ್ಪ, ಮಹೇಂದ್ರ, ಕರವೇ ಜಯರಾಂ, ನಾಗಣ್ಣಗೌಡ, ಕುದರಗುಂಡಿ ನಾಗರಾಜು, ದೊರೆಸ್ವಾಮಿ, ಕೆ.ಎಂ. ನಂಜುಂಡಯ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ
ಎಂಎಂಹಿಲ್ಸ್‌ನಿಂದ ಬರುತ್ತಿದ್ದ ಸಾರಿಗೆ ಬಸ್ಸಿನ ಟೈಯರ್‌ ಸ್ಫೋಟ: ಇಬ್ಬರು ಬಲಿ, 40 ಗಾಯ