ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

KannadaprabhaNewsNetwork |  
Published : May 24, 2024, 12:47 AM IST
23ಎಚ್ಎಸ್ಎನ್18 : ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್‌ ನಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಪೂರ್ಣಿಮಾ. | Kannada Prabha

ಸಾರಾಂಶ

ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿಗಳಿಗೆ ಸೂಚನೆ । ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾದ ಜಿಲ್ಲಾಧಿಕಾರಿ ಸತ್ಯಭಾಮ

ಕನ್ನಡಪ್ರಭ ವಾರ್ತೆ ಹಾಸನ

ಮುಂಗಾರು ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ‘ಕೃಷ್ಣ’ದಿಂದ ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ, ಪಂಚಾಯಿತಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದರು.

ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒಗಳು ಇದರ ಮೇಲುಸ್ತುವಾರಿ ವಹಿಸಬೇಕು ಎಂದು ತಿಳಿಸಿದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದೆ. ಆದರೆ ಜಿಲ್ಲಾ, ತಾಲೂಕಿಗೆ ಬೇಡಿಕೆಯನುಸಾರ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ವಿತರಣೆ ಮಾಡಬೇಕು. ರೈತರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯು ತಮ್ಮಲ್ಲಿರುವ ದಾಸ್ತಾನುಗಳ ಬಗ್ಗೆ ನಿಯಮಿತವಾಗಿ ರೈತರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕು. ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಿದೆಯೇ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭೆ ಚುನಾವಣೆಯ ಮತದಾನ ಮುಕ್ತಾವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದರು.

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕಂದಾಯ ಸಚಿವ ಕೃಷ್ಣಬೈರೇಗೌಡ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಸೇರಿ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''