ಗದಗ: ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಪ್ರಮುಖ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನ ನೀಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಭೂಮಿಯ ಸಂರಕ್ಷಣೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವಿಕೆ ಇಂದಿನ ಅಗತ್ಯವಾಗಿದೆ. ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಮಣ್ಣಿನ ಪರೀಕ್ಷೆ, ನೀರಿನ ಸಮರ್ಪಕ ಬಳಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಖೇತ್ ಬಚಾವೋ ಅಭಿಯಾನದ ಮೂಲಕ ರೈತರಿಗೆ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಸವಕಳಿ ತಡೆ, ಬೆಳೆ ವೈವಿಧ್ಯತೆ, ನೀರಿನ ಸಂರಕ್ಷಣೆ ಹಾಗೂ ಪರಿಸರಸ್ನೇಹಿ ಕೃಷಿ ಪದ್ಧತಿಗಳ ಕುರಿತು ಅರಿವು ಮೂಡಿಸಲಾಗುವುದು. ಈ ಅಭಿಯಾನವು ರೈತರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಿದ್ದು, ರೈತ ಸಮುದಾಯವೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದರ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದರು.