ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಕೇಂದ್ರ ಸರ್ಕಾರವು 2100ಕ್ಕೂ ಹೆಚ್ಚು ಯೋಜನೆಗಳ ಮೂಲಕ 42,000 ಕೋಟಿ ರು. ಅನುದಾನ ನೀಡಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ರೈತರಿಗೆ ಲಾಭವಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಶನಿವಾರ ಇಲ್ಲಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.ರೈತರನ್ನು ಕಾಡುತ್ತಿರುವ ಭತ್ತದ ಬೆಂಬಲ ಬೆಲೆ ಮತ್ತು ಕಾಳು ಮೆಣಸಿನ ಬೆಳೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯಯೋಜನೆಯನ್ನು ರೂಪಿಸಿಬೇಕು ಎಂದವರು ಅಭಿಪ್ರಾಯಪಟ್ಟರು.ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಬೇಕೆನ್ನುವುದು ಬಹುಕಾಲದ ಬೇಡಿಕೆ ಇದೆ. ಕಾಲೇಜು ಸ್ಥಾಪನೆ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರವಾಗಿದ್ದು, ಕೃಷಿ ಸಚಿವರು ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದರೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ಹೇಳಿದರು.ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉಡುಪಿ ವೈಶಿಷ್ಟ್ಯಪೂರ್ಣ ಜಿಲ್ಲೆಯಾಗಿದ್ದು, 12 ತಿಂಗಳು 12 ವಿಧದ ಬೆಳೆ ಬೆಳೆಯುವ ಹವಾಗುಣ ಹೊಂದಿದೆ. ಇಲ್ಲಿ ಕೃಷಿಗೆ ವಿಪುಲ ಅವಕಾಶಗಳಿವೆ. ಬ್ರಹ್ಮಾವರದಲ್ಲಿ 345 ಎಕರೆ ಮತ್ತು ಬೈಕಾಡಿಯಲ್ಲಿ 110 ಎಕರೆ ಕೃಷಿ ಭೂಮಿ ಮೀಸಲಿದ್ದು, ಕೃಷಿ ಚಟುವಟಿಕೆಗಳಿಗೆ ಈ ಭೂಮಿಯನ್ನು ಬಳಸಿಕೊಳ್ಳೇಬೇಕು ಎಂದರು.ಈ ಸಂದರ್ಭ ಜಿಲ್ಲೆಯ ಅನೇಕ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಆರ್.ಸಿ. ಜಗದೀಶ್, ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ., ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ತಾಲೂಕು ಗ್ಯಾ.ಯೋ.ಅ. ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ ಭಾಗವಹಿಸಿದ್ದರು.ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ., ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ್ ಆರ್., ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಾಜು ಎಂ.ಎಸ್., ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಎಂ.ಸಿ.ರೆಡ್ಡಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ನಾಯ್ಕ್, ಕೆಳದಿ ವಿವಿಯ ಡಾ. ಬಿ.ಎಂ. ದುಷ್ಯಂತ್ ಕುಮಾರ್, ಡಾ.ಜಿ.ಕೆ. ಗಿರಿಜೇಶ್, ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕ ಅಮಿತಾಭ್ ಶಂಕರ್, ಬ್ರಹ್ಮಾವರ ಕೃಷಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.