ಕನ್ನಡಪ್ರಭ ವಾರ್ತೆ ಬೆಂಗಳೂರುನಗರದ ಮಾಲ್, ಸೂಪರ್ ಮಾರ್ಕೆಟ್ ಸೇರಿದಂತೆ ವಾಣಿಜ್ಯ ಮಳಿಗಳಲ್ಲಿ ಫೆಬ್ರವರಿ ಅಂತ್ಯದೊಳಗೆ ಶೇ.60ರಷ್ಟು ಕನ್ನಡ ಭಾಷೆ ಇರುವ ನಾಮಫಲಕಗಳನ್ನು ಅಳವಡಿಕೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಭಾನುವಾರ ಮಲ್ಲೇಶ್ವರ ಬಿಬಿಎಂಪಿಯ ಐಪಿಪಿ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತುಷಾರ್ ಗಿರಿನಾಥ್ ಅವರಿಗೆ ಮಾಲ್-ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ದೊಡ್ಡ ಅಕ್ಷರದಲ್ಲಿ ನಮೂದಿಸಬೇಕೆಂಬ ಆದೇಶ ಪಾಲಿಸದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಬಿಬಿಎಂಪಿ ಅಧಿಕಾರಿಗಳು ಹಾಗೂ ನಾರಾಯಣಗೌಡ ಅವರೊಂದಿಗೆ ಸಭೆ ನಡೆಸಿದ ತುಷಾರ್ ಗಿರಿನಾಥ್, ರಾಜಧಾನಿ ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಎಲ್ಲಾ ವಲಯ ಆಯುಕ್ತರ ಜತೆಗೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದೆಂದು ಹೇಳಿದರು.
ನಗರದಲ್ಲಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1400 ಕಿ.ಮೀ. ನಷ್ಟಿದ್ದು, ಈ ರಸ್ತೆಗಳಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುವುದು. ಸರ್ವೆಯ ನಂತರ ಶೇ.60ರಷ್ಟು ಕನ್ನಡ ಭಾಷೆ ಬಳಸದ ಮಳಿಗೆಗಳಿಗೆ ನೋಟಿಸ್ ನೀಡಲಾಗುವುದು. ಬಳಿಕ ಫೆಬ್ರವರಿ 28ರವರೆಗೆ ಸಮಯಾವಕಾಶ ನೀಡಲಾಗುವುದು. ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ನಗರದಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ನಗರದ ಮಾಲ್‌ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾಲ್‌ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ 15-20 ದಿನಗಳ ಒಳಗಾಗಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ಉಪ ಆಯುಕ್ತ ಮಂಜುನಾಥ ಸ್ವಾಮಿ, ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಕನ್ನಡ ಸಂಘದ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.ಅಧಿಕಾರಿಗಳ ನಿರ್ಲಕ್ಷ್ಯ: ನಾರಾಯಣಗೌಡ
ನಾಮಫಲಕದಲ್ಲಿ ಕನ್ನಡ ಭಾಷೆ ಮಾಯ ಆಗಿರುವುದಕ್ಕೆ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದ್ದು, ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಆಗ್ರಹಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಹೇಳಿದರು.ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕ ಅಳವಡಿಕೆ ಮಾಡದ ಮಾಲೀಕರ ವಿರುದ್ಧ ಅಧಿಕಾರಿಗಳು ಕಠಿಣವಾದ ಕ್ರಮ ಕೈಗೊಂಡಿಲ್ಲ. ವಾಣಿಜ್ಯ ಪರವಾನಗಿ ನವೀಕರಣ ಸಂದರ್ಭದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಬಗ್ಗೆ ಪರಿಶೀಲನೆ ನಡೆಸುತ್ತಿಲ್ಲ. ಹಣ ಪಡೆದು ನವೀಕರಣ ಮಾಡುತ್ತಿದ್ದಾರೆ. ಮಾಲ್ ಹೊರ ಭಾಗದಲ್ಲಿ ಒಂದು ನಾಮಫಲಕ, ಒಳಭಾಗದಲ್ಲಿ ಮತ್ತೊಂದು ನಾಮಫಲಕ ಅಳವಡಿಕೆ ಮಾಡಲಾಗಿದೆ. ಈ ಎಲ್ಲಾ ವಿಷಯಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರ ಗಮನಕ್ಕೆ ತರಲಾಗಿದೆ. ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ ಎಂದರು.
ಜತೆಗೆ ಈವರೆಗೆ ನಗರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಮಾಡದ ಎಷ್ಟು ಮಂದಿಗೆ ದಂಡ ಮತ್ತು ಶಿಕ್ಷೆ ವಿಧಿಸಲಾಗಿದೆ ಎಂಬ ಮಾಹಿತಿ ನೀಡುವಂತೆ ಆಯುಕ್ತರಿಗೆ ಕೇಳಲಾಗಿದೆ ಎಂದರು.---
ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು ತದನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಜತೆಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದು.-ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ
---ಕನ್ನಡ ನಾಮಫಲಕ ಅಳವಡಿಕೆ ಮಾಡದ ಹೆಬ್ಬಾಳದ ಮಾಲ್ ಅಫ್ ಏಷ್ಯಾದ ಮಾಲೀಕರ ವಿರುದ್ಧ ಡಿ.27ರಂದು ಬೆಳಗ್ಗೆ 10ಕ್ಕೆ ಸಾದಹಳ್ಳಿ ಗೇಟ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.
-ನಾರಾಯಣಗೌಡ, ಕರವೇ ಅಧ್ಯಕ್ಷ.