ಖಾಸಗಿ ಶಾಲೆಗಳ ಶುಲ್ಕ ವಸೂಲಾತಿ, ದಾಖಲಾತಿ ಮಾಹಿತಿ ಪ್ರಕಟ ಕಡ್ಡಾಯ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ

KannadaprabhaNewsNetwork |  
Published : Feb 06, 2025, 11:46 PM IST
ಭದ್ರಾವತಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿದರು. | Kannada Prabha

ಸಾರಾಂಶ

ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೂಚಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಲು ನಿರ್ದೇಶನ

ಕನ್ನಡಪ್ರಭ ವಾರ್ತೆ ಭದ್ರಾವತಿ

ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೂಚಿಸಿದರು.

ನಗರದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಶಿಕ್ಷಣ ಹಕ್ಕು ಕಾಯಿದೆ-೨೦೦೯ರ ಸೆಕ್ಷನ್-೨(ಬಿ)ರಂತೆ ಎಲ್ಲಾ ಖಾಸಗಿ ಶಾಲೆಗಳು ತಮ್ಮ ಅಧಿಸೂಚಿತ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-೧೩ರ ಅಂಶಗಳನ್ನು ಸಹ ಕಡ್ಡಾಯವಾಗಿ ಮಾ.೩೧ರೊಳಗಾಗಿ ಪ್ರಕಟಿಸಬೇಕೆಂದರು.

ಶಿಕ್ಷಣ ಹಕ್ಕು ಕಾಯಿದೆ -೨೦೦೯ರ ಪ್ರಕಾರ ಆರ್.ಟಿ.ಇ ಮಕ್ಕಳ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಇದರಿಂದ ಆಡಳಿತ ಮಂಡಳಿಯವರು ಯಾವುದೇ ರೀತಿಯ ದಾಖಲಾತಿ/ಬೋದನಾ ಶುಲ್ಕವನ್ನು ವಿದ್ಯಾರ್ಥಿಯ ಪೋಷಕರುಗಳಿಂದ ಪಡೆಯುವಂತಿಲ್ಲ ಎಂದರು.

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಹಲವಾರು ಕಾರ್ಯತಂತ್ರಗಳನ್ನು ಕೈಗೊಳ್ಳಲಾಗಿದ್ದು, ಮಕ್ಕಳು ಪರೀಕ್ಷೆ ಸಮರ್ಥವಾಗಿ ಎದುರಿಸುವ ಮೂಲಕ ಉತ್ತಮ ಫಲಿತಾಂಶ ಕಂಡುಕೊಳ್ಳುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ವಿಶ್ಲೇಷಣೆ ಮತ್ತು ೨೦೨೪-೨೫ನೇ ಸಾಲಿನ ಫಲಿತಾಂಶ ಸುಧಾರಣೆಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮುಖ್ಯಶಿಕ್ಷಕರೊಂದಿಗೆ ಚರ್ಚೆ ನಡೆಸಲಾಗಿದೆ. ೮ನೇ ತರಗತಿಯಿಂದಲೇ ಮಕ್ಕಳ ಕಲಿಕೆಗೆ ಒತ್ತು ನೀಡಲು ಮುಖ್ಯ ಶಿಕ್ಷಕರಿಗೆ ಬ್ಲಾಕ್ ಮಟ್ಟದಲ್ಲಿ ಸಭೆ. ಮಕ್ಕಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿ ಕಲಿಕಾ ಸಾಮರ್ಥಗಳಿಗೆ ಅನುಗುಣವಾಗಿ ಗುಂಪುಗಳಾಗಿ ವಿಂಗಡನೆ. ಎಲ್ಲಾ ಶಾಲೆಗಳಲ್ಲಿ ಪೋಷಕರ ಮತ್ತು ತಾಯಂದಿರ ಸಭೆ. ಪ್ರತಿ ತಿಂಗಳು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಪರಿಶಿಷ್ಟ ಜಾತಿ/ಪಂಗಡ/ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಂದ ಬರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳಿಗೆ ಭೇಟಿನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ. ಮಕ್ಕಳಿಗೆ ಪರೀಕ್ಷೆಯ ಭಯ ಹೋಗಲಾಡಿಸಲು ಬ್ಲಾಕ್ ಮಟ್ಟದಲ್ಲಿ ತಜ್ಞರಿಂದ ವಿಶೇಷ ಕಾರ್ಯಾಗಾರ. ಶಾಲಾ ಹಂತದಲ್ಲಿ ಕಳೆದ ೩ ವರ್ಷಗಳ ಪ್ರಶ್ನೆಪತ್ರಿಕೆಗಳಿಗೆ ವಿದ್ಯಾರ್ಥಿಗಳಿಂದ ಉತ್ತರ ಬರೆಸುವಲ್ಲಿ ಕ್ರಮ. ತಾಲೂಕು ಮಟ್ಟದ ಅಧಿಕಾರಿಗಳಿಗೆ ತಲಾ ೨ ಶಾಲೆಗಳ ಉಸ್ತುವಾರಿ ನೀಡಿ ಫಲಿತಾಂಶ ಸುಧಾರಣೆಗೆ ಸೂಕ್ತ ಸಲಹೆ-ಮಾರ್ಗದರ್ಶನ. ಶೇಕಡ ೧೦೦ಕ್ಕೆ ೧೦೦ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಹಾಗು ಕಳೆದ ಸಾಲಿನಲ್ಲಿ ಆಯಾ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಯಶೋಗಾಥೆಗಳ ಹಂಚಿಕೆ ನಡೆಸಲಾಗಿದೆ ಎಂದರು.

ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌