ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜು. 11ರಂದು ಬೆಳಗ್ಗೆ 11ಕ್ಕೆ ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಭಿನಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ತಿಳಿಸಿದರು.
ಸಮಾರಂಭದಲ್ಲಿ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳು, ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ 2026ನೇ ವರ್ಷದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಪುರಸ್ಕಾರಕ್ಕೆ ರಾಜ್ಯಾದ್ಯಂತ ಒಟ್ಟು 11000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು.ಎನ್‌ಪಿಎಸ್ ಸಮಿತಿಯಿಂದ ತಕ್ಷಣವೇ ವರದಿ ಪಡೆದುಕೊಂಡು, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ(ಒಪಿಎಸ್)ಯನ್ನು ಮರುಜಾರಿಗೊಳಿಸಬೇಕು ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಪತ್ರ ಸಲ್ಲಿಸಲಾಗುತ್ತದೆ ಎಂದರು.
ಗದಗ: ಹಳೆ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸುವಂತೆ ಒತ್ತಾಯಿಸಲು ಹಾಗೂ ಮುಖ್ಯಮಂತ್ರಿಗಳ ನಮ್ಮಭಿಮಾನ ಸಮಾವೇಶದಲ್ಲಿ ಪಾಲ್ಗೊಳ್ಳಲು ಜು. 11ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ ಲಿಂಗದಾಳ ತಿಳಿಸಿದರು.ಆರೋಗ್ಯ ಇಲಾಖೆಯ ವಿವಿಧ ವೃಂದದ ನೌಕರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಅಜಯಕುಮಾರ್ ಕಲಾಲ್, ಡಾ. ರಾಜೇಂದ್ರ ಗಡಾದ ಮಾತನಾಡಿದರು. ವೈ.ಎನ್. ಕಡೇಮನಿ, ಸರೋಜಾ ಕಟ್ಟಿಮನಿ, ಬಿ.ಸಿ. ಹಿರೇಹಾಳ, ವಿವೇಕ ತಿರುಮಲ್ಲೆ, ವೈ.ವೈ. ಹಕ್ಕಿ, ಎಸ್.ಬಿ. ಗಡಾದ, ಬಸವರಾಜ ತಡಸಿ, ರಮೇಶ ಹರಹುಣಸಿ, ಲಿಂಗರಾಜ ನಾಶಿ, ಶ್ರೀನಿವಾಸ ಬಿದರಕುಂದಿ ಸೇರಿದಂತೆ ವಿವಿಧ ವೃಂದದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆರೋಗ್ಯ ನಿರೀಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಡಿಗೇರ ನಿರೂಪಿಸಿದರು. ಬಸವರಾಜ ತಡಸಿ ಸ್ವಾಗತಿಸಿದರು. ಎಂ.ಎಸ್. ರಬ್ಬನಗೌಡ ವಂದಿಸಿದರು.