ಕನ್ನಡಪ್ರಭ ವಾರ್ತೆ ಕುಶಾಲನಗರ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯ ಹಾಗೂ ನೆರೆಯ ವಿವಿಧೆಡೆಯ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ಮಾರ್ಚ್ ಎರಡರಂದು ಅರೆ ಭಾಷೆ ಗಡಿನಾಡ ಉತ್ಸವ-2025 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪೊನ್ನಚ್ಚನ ಮೋಹನ್ ತಿಳಿಸಿದ್ದಾರೆ.ಅವರು ಕುಶಾಲನಗರದ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಗಡಿ ಭಾಗದಲ್ಲಿ ಉತ್ಸವ ಮೂಲಕ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದರು.
ಭಾಷೆ ಅಳಿದಲ್ಲಿ ಸಮುದಾಯದ ಸಂಸ್ಕೃತಿ ನಾಶ ಆಗುವ ಆತಂಕ ವ್ಯಕ್ತಪಡಿಸಿದ ಅವರು ಈ ಹಿನ್ನೆಲೆಯಲ್ಲಿ ಮಾರ್ಚ್ ಎರಡರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಅಂದು ಬೆಳಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ 9 ಗಂಟೆಗೆ ಮೆರವಣಿಗೆ ಹೊರಡಲಿದೆ.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮೆರವಣಿಗೆಗೆ ಚಾಲನೆ ನೀಡುವರು. ನಂತರ ಬೆಳಗ್ಗೆ 10 ಗಂಟೆಗೆ ರೈತ ಸಹಕಾರ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ವಹಿಸಲಿದ್ದು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸುವರು.ವಿರಾಜಪೇಟೆ ಶಾಸಕರಾದ ಎ ಎಸ್ ಪೊನ್ನಣ, ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಜಿ ಸ್ಪೀಕರ್ ಕೆ ಜಿ ಬೋಪಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಉತ್ಸವದಲ್ಲಿ ಅಕಾಡೆಮಿಯ ಸದಸ್ಯರುಗಳು ಹಾಗೂ ಗೌಡ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ಸಂಜೆ ಮೂರು ಗಂಟೆಗೆ ಸಮಾರೋಪ ಸಮಾರಂಭ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಎ ಮಂಜು, ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಉಪಸ್ಥಿತರಿರುವರು ಎಂದು ಹೇಳಿದರು.
ಪ್ರತಿಯೊಬ್ಬ ಸಮಾಜದ ಸದಸ್ಯರು ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.ಇದೇ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಗೌಡ ಸಮಾಜ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಶಿ, ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ ಇದ್ದರು.