ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ

KannadaprabhaNewsNetwork |  
Published : Aug 07, 2024, 01:05 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಬಗ್ಗೆ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಮತ್ತು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ನಡೆಯಿತು. | Kannada Prabha

ಸಾರಾಂಶ

ಮಾನವ ಕಳ್ಳ ಸಾಗಣೆ ತಡೆ, ಭ್ರೂಣ ಹತ್ಯೆ ತಡೆ, ಬಾಲ್ಯ ವಿವಾಹ ತಡೆ, ಹೆಣ್ಣು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಇಂತಹ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರಬೇಕು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಡೆದ ‘ಪಿ.ಸಿ.ಪಿ, ಎನ್.ಡಿ.ಟಿ ಕಾಯ್ದೆ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಣೆ ತಡೆ, ಭ್ರೂಣ ಹತ್ಯೆ ತಡೆ, ಬಾಲ್ಯ ವಿವಾಹ ತಡೆ, ಹೆಣ್ಣು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಇಂತಹ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರಬೇಕು. ಸಾರ್ವಜನಿಕರು ಕೂಡ ಯಾವುದೇ ಮೂಢನಂಬಿಕೆ ಅಥವಾ ಆಸೆ- ಆಮಿಷಗಳಿಗೆ ಒಳಗಾಗದೆ ಮಕ್ಕಳ ರಕ್ಷಣೆ, ಭ್ರೂಣ ಹತ್ಯೆಗಳನ್ನು ತಡೆಯಬೇಕು. ಭ್ರೂಣ ಹತ್ಯೆ, ಬಾಲ್ಯ ವಿವಾಹ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದಲ್ಲಿ ಅಂತವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾನವ ಕಳ್ಳಸಾಗಣೆಗೆ ಸಂಬಂಧಿಸಿ ಪೋಲಿಸ್ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು. ಮಾನವ ಕಳ್ಳಸಾಗಣೆ, ಭ್ರೂಣ ಹತ್ಯೆ ಇವುಗಳಿಂದ ಜಿಲ್ಲೆಯನ್ನು ಮುಕ್ತ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ಸೋನಿಯಾ ಮಾತನಾಡಿ, ಪ್ರಸಕ್ತ ವರ್ಷ ಕರ್ನಾಟಕದಲ್ಲಿ 1000 ಪುರುಷರಿಗೆ 973 ಸ್ತ್ರೀಯರು ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1000 ಪುರುಷರಿಗೆ 946 ಸ್ತ್ರೀಯರ ಸಂಖ್ಯೆಯಿದೆ. ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಾವಸ್ಥೆಯ ಮಹಿಳೆಯರು ತಮ್ಮ ಮಗುವಿನ ಬೆಳವಣಿಗೆ ಬಗ್ಗೆ ಮಾತ್ರ ತಿಳಿದುಕೊಳ್ಳಬೇಕು ಎಂದು ಹೇಳಿದರು.

ವಕೀಲ ಮಹೇಶ್ ದಾಸ್ ಮಾತನಾಡಿ, ಭ್ರೂಣಲಿಂಗ ಹತ್ಯೆ ತಡೆಗಟ್ಟಲು 1988 ರಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. ಈ ಭ್ರೂಣಲಿಂಗ ಹತ್ಯೆ ಮಾಡುವದು ಶಿಕ್ಷಾರ್ಹ ಅಪರಾಧವಾಗಿದ್ದು, ಮೊದಲ ಪ್ರಕರಣದ ವೈದ್ಯರಿಗೆ 10 ಸಾವಿರ ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆಯಿದೆ. ಹೆಣ್ಣು-ಗಂಡು ಮಗು ಎನ್ನುವ ತಾರತಮ್ಯ ಬಿಟ್ಟು, ಪ್ರತಿಯೊಬ್ಬರೂ ಹೆಣ್ಣು ಭ್ರೂಣ ಹತ್ಯೆ ತಡೆಯುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಸಿನಿಯರ್ ಸ್ಪೆಷಲಿಸ್ಟ್ ಇನ್ ಪಾಟ್ನರ್ಸ್ ವಿಹಾನ್ ಸಂಸ್ಥೆಯ ರೋವಿನ ಬಾಸ್ಟೀನ್ ಅವರು ಮಾತನಾಡಿ, ಸಮಾಜದಲ್ಲಿನ ಬಡತನ ನಿರ್ಮೂಲನೆ, ಹೆಣ್ಣು ಶೋಷಣೆ, ಲಿಂಗ ಅಸಮಾನತೆಯನ್ನು ನಿರ್ಮೂಲನೆ ಮತ್ತು ಸಾರ್ವಜನಿಕರು ಜಾಗೃತಿ ವಹಿಸುವುದಿಂದ ಮಾನವ ಕಳ್ಳ ಸಾಗಾಣಿಕೆ ತಡೆಯಬಹುದೆಂದು ವಿಶೇಷ ಉಪನ್ಯಾಸವನ್ನು ನೀಡಿದರು.

ಜಿಪಂ ಸಿಇಒ ಡಾ. ಕೆ.ಎನ್. ಅನುರಾಧಾ, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ. ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮೀ ಎಸ್‌, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುನಿಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ ಸೇರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಲಿಕಾನ್‌ ಸಿಟಿಯಲ್ಲಿ ಮಹಾಶಿವರಾತ್ರಿ ಸಂಭ್ರಮ
ಬಿಡಿಎ ಖಾಲಿ ನಿವೇಶನಗಳ ದಂಡದ ಶುಲ್ಕ ಪರಿಷ್ಕರಣೆ