28ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮ ದಿನಾಚರಣೆ

KannadaprabhaNewsNetwork |  
Published : Jan 14, 2026, 04:00 AM IST
ಚಿತ್ರ :  13ಎಂಡಿಕೆ2 :  ಜಿಲ್ಲಾಡಳಿತದಿಂದ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದವರು.  | Kannada Prabha

ಸಾರಾಂಶ

ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ 28ರಂದು ಹಾಗೂ ಹುತಾತ್ಮರ ದಿನ ಆಚರಣೆ 30ರಂದು ನಡೆಯುವ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ 28ರಂದು ಹಾಗೂ ಹುತಾತ್ಮರ ದಿನ ಆಚರಣೆ 30ರಂದು ನಡೆಯುವ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ರಾಷ್ಟ್ರದ ಪ್ರಥಮ ಸೇನಾ ಮಹಾ ದಂಡನಾಯಕ, ವೀರ ಸೇನಾನಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಸೈನಿಕ ಶಾಲೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ನಗರದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಹೂವಿನ ಅಲಂಕಾರ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜನರೂ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು. ಹುತಾತ್ಮರ ದಿನ: 30ರಂದು ಹುತಾತ್ಮರ ದಿನ ಆಯೋಜನೆ ಬಗ್ಗೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಹೊರ ತೆಗೆದು ಹೂವಿನ ಅಲಂಕೃತದೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಪೊಲೀಸ್ ವಾದ್ಯದೊಂದಿಗೆ ಗೌರವ ಸಲ್ಲಿಸಿ, ನಂತರ ಜಿಲ್ಲಾಡಳಿತ ಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಮೂಲಕ ಸಾಗಿ ಗಾಂಧಿ ಮಂಟಪದಲ್ಲಿ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ನಂತರ ಪೊಲೀಸ್ ವಾದ್ಯದೊಂದಿಗೆ ಗೌರವ ವಂದನೆ ಸಲ್ಲಿಸಿ, ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಭದ್ರವಾಗಿ ಇಡಲಾಗುತ್ತದೆ. ಈ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್‌ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ ‘ಗಾಂಧಿ ಸ್ಮಾರಕ ಉದ್ಯಾನವನ’ ಕಾಮಗಾರಿ ಅರ್ಧಕ್ಕೆ ನಿಂತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಸರ್ಕಾರದಿಂದ 50 ಲಕ್ಷ ರು. ಬಿಡುಗಡೆಯಾಗಿತ್ತು. ಇನ್ನು 55 ಲಕ್ಷ ರು. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಯಾವುದೇ ಕಾರ್ಯ ಪ್ರಗತಿ ಆಗದಿರುವುದು ನೋವಿನ ಸಂಗತಿ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ, ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶಾಸಕರು ಅನುದಾನ ಬಿಡುಗಡೆಗೆ ಸತತ ಪ್ರಯತ್ನ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಮುಂದಿನ ಬಜೆಟಿನಲ್ಲಿ ಅನುದಾನ ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಕಾನೆಹಿತ್ಲು ಮೊಣ್ಣಪ್ಪ, ತಹಶೀಲ್ದಾರ್ ಶ್ರೀಧರ, ಓಂಕಾರೇಶ್ವರ ದೇವಾಲಯದ ಆಡಳಿತಾಧಿಕಾರಿ ದೇವರಾಜು, ಅಂಬೆಕಲ್ಲು ನವೀನ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಮ್ಮಿ ಸ್ವಿಕ್ವೇರಾ, ನಗರಸಭೆಯ ನಿಶಾ, ಇತರರು ಹಲವು ಸಲಹೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಡಿ ಮಕ್ಕಳಿಗೆ ಸೆಗಣಿ ತೆಗೆಯುವ ಕೆಲಸ!
ಮಂಜನಾಡಿ ಗುಡ್ಡ ಕುಸಿತ ಪ್ರಕರಣ: ತಾಂತ್ರಿಕ ತನಿಖೆ ಆರಂಭ