ಕನ್ನಡಪ್ರಭ ವಾರ್ತೆ ಬೆಳಗಾವಿ
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಒಡಕು ಮೂಡಿಸುವ ದುಸ್ಸಾಹಸ ಮತ್ತು ಷಡ್ಯಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ಮುಸ್ಲಿಂ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.ನಗರದ ಸಾಂಬ್ರಾ ವಿಮಾನ ನಿಲ್ದಾನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಅಲ್ಪಸಂಖ್ಯಾತರಿಗೆ ಮೀಸಲಿಡುವುದಾಗಿ ಘೋಷಿಸಿದ್ದರು. ಅದೇ ರೀತಿ ಶನಿವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡುವ ಬಗ್ಗೆ ಉಲ್ಲೇಖವಾಗಿಲ್ಲ. ಹಾಗಾಗಿ, ಈ ಅಸಂವಿಧಾನಾತ್ಮಕ ತೀರ್ಮಾನವನ್ನು ನಾವು ಖಂಡಿಸುತ್ತೇವೆ, ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ವಿರೋಧಿಸುತ್ತೇವೆ ಎಂದದು ಹೇಳಿದರು.
ಸದನದೊಳಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿದ್ದೇವೆ. ಹಣಕಾಸಿನ ಮುಗ್ಗಟ್ಟಿದೆ ಎಂದು ಬಿಜೆಪಿ ಘೋಷಿಸಿದ್ದ ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ಸರ್ಕಾರ ಬಂದಿತ್ತು. ನಾವು ಸದನದಲ್ಲಿ ಈ ವಿಷಯ ಚರ್ಚಿಸಿದ್ದಲ್ಲದೆ ಹೋರಾಟಕ್ಕೆ ಇಳಿಯುತ್ತೇವೆಂಬುದನ್ನು ಮನಗಂಡು ಸಿಎಂ ಸಿದ್ದರಾಮಯ್ಯ ಅವರು ವಿವಿ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದರು. ಇದು ನಮ್ಮ ಹೋರಾಟದ ಫಲ ಎಂದು ಸಮರ್ಥಿಸಿಕೊಂಡರು.ಮೈಕ್ರೋ ಫೈನಾನ್ಸ್ ಹಾವಳಿ ಕುರಿತು ಸದನದಲ್ಲಿ ಚರ್ಚೆ ಆಗಿದೆ. ಈ ಕುರಿತು ಒಂದು ಬಿಲ್ ಕೂಡ ಪಾಸ್ ಆಗಿದೆ. ಬಿಗಿಯಾದ ಕಾನೂನು ಅನುಷ್ಠಾನಕ್ಕೆ ತರುತ್ತೇವೆ. ಫೈನಾನ್ಸ್ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಸರ್ಕಾರ ಹೇಳಿದೆ. ಈಗಾಗಲೇ ಸಾಕಷ್ಟು ಸಾವು ನೋವುಗಳು ಆಗಿವೆ. ಹಾಗಾಗಿ, ಸರ್ಕಾರ ಎಚ್ಚೆತ್ತುಕೊಂಡು ಬಡವರಿಗೆ ಅನ್ಯಾಯ ಆಗುತ್ತಿರುವುದನ್ನು ಸರಿಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಆಗ್ರಹಿಸಿದರು.
ಉತ್ತರ ಕರ್ನಾಟಕಕ್ಕೆ ಅನುಕೂಲ ಆಗಬೇಕೆಂದು ನೀರಾವರಿ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ₹19 ಸಾವಿರ ಕೋಟಿ ಅನುದಾನ ನೀಡಿತ್ತು. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಕೈಗೊಂಡು ₹50 ಸಾವಿರ ಕೋಟಿ ನೀರಾವರಿ ಯೋಜನೆಗೆ ನೀಡುವುದಾಗಿ ಹೇಳಿದ್ದರು. ಅದನ್ನು ಕೂಡ ಸಿದ್ದರಾಮಯ್ಯನವರು ಮರೆತಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸಿಲ್ಲ. ಎಲ್ಲೂ ಕೂಡ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ವಿಜಯೇಂದ್ರ ಹರಿಹಾಯ್ದರು.ಶನಿವಾರ ನಡೆದ ಚುನಾವಣೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ ಪವಾರ್, ಉಪಮೇಯರ್ ಆಗಿ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇವೆ. ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಅತೀ ಹೆಚ್ಚು ಕೆಲಸ ಕಾರ್ಯಗಳು ಆಗಲಿ. ಅದರ ಜೊತೆಗೆ ಎಲ್ಲ ಸಮಾಜ, ವರ್ಗ ಹಾಗೂ ಭಾಷಿಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗಲಿ ಎಂದು ಸಲಹೆ ನೀಡಿದರು.