ನರಗುಂದ: ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿ ಬೆಳೆ ಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆಂದು ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದರು.
ಅವರು 3015ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ತಾಲೂಕಿನ ರೈತರು ಮುಂಗಾರು ಹಂಗಾಮಿನಲ್ಲಿ ವಾಣಿಜ್ಯ ಬೆಳೆಗಳಾದ ಗೋವಿನಜೋಳ, ಬಿ.ಟಿ. ಹತ್ತಿ, ಸೂರ್ಯಕಾಂತಿ, ಈರುಳ್ಳಿ, ತೊಗರಿ ಸೇರಿದಂತೆ ಮುಂತಾದ ಬೆಳೆಗಳನ್ನು ಅಲ್ಪ ಸ್ವಲ್ಪ ಮಳಗೆ ಬಿತ್ತನೆ ಮಾಡಿದ್ದರು. ಆದರೆ ಸಮಯಕ್ಕೆ ಸರಿಯಾಗಿ ಮಳೆಯಾಗದೇ ಈ ಬೆಳೆಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿದ್ದರಿಂದ ರೈತ ಸಮುದಾಯ ಬೆಳೆ ಹಾನಿ ಅನುಭವಿಸಿ ನಾಲ್ಕು ತಿಂಗಳ ಗತಿಸಿದರೂ ಕೂಡ ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ನೀಡದೆ ಅನ್ನಾಯ ಮಾಡುತ್ತಿದೆ. ಈ ಬಗ್ಗೆ ಹಲವಾರು ಬಾರಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಮಾಡಿಕೊಂಡರು ಕೂಡ ಯಾವುದೇ ಪ್ರಯೋಜನವಾಗಿಲ್ಲವೆಂದು ಗಂಭೀರ ಆರೋಪ ಮಾಡಿದರು. ಸರ್ಕಾರಕ್ಕೆ ಈಗಲು ಕಾಲ ಮಿಂಚಿಲ್ಲ, ಒಂದು ವಾರದೊಳಗೆ ರೈತರಿಗೆ ಬೆಳೆ ಹಾನಿ ಪರಿಹಾರ ನೀಡದಿದ್ದರೆ ತಾಲೂಕಿನ ರೈತರು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು. ಈ ಸಂದಭದಲ್ಲಿ ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಹನಮಂತ ಸರನಾಯ್ಕರ, ಮಲ್ಲೇಶ ಅಣ್ಣಿಗೇರಿ, ಯಲ್ಲಪ್ಪ ಚಲವಣ್ಣವರ, ವಾಸು ಚವಾಣ, ಅರ್ಜುನ ಮಾನೆ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ ಇದ್ದರು.