ಧಾರವಾಡ:
2025ರಲ್ಲಿ ಎರಡು ಬಾರಿ ವಿದ್ಯಾರ್ಥಿಗಳು ಹೋರಾಟ ನಡೆಸಿದಾಗಲೂ ಸರ್ಕಾರದ ಒತ್ತಡಕ್ಕೆ ಸಿಲುಕಿ ಪೊಲೀಸ್ ಇಲಾಖೆ ಪ್ರತಿಭಟನೆ ಹತ್ತಿಕ್ಕಿತ್ತು. ಡಿ. 1ರಂದು ಶ್ರೀನಗರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿಯೂ ಪೊಲೀಸ್ ಇಲಾಖೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೆ ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು. ತದನಂತರವೂ ಪರವಾನಗಿ ನೀಡದೇ ವಿದ್ಯಾರ್ಥಿಗಳ ಆಕ್ರೋಶಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಕಾರಣವಾಗಿದ್ದರು.
ಇದಾದ ಬಳಿಕ ವಿದ್ಯಾರ್ಥಿಗಳ ನಿಯೋಗ ಮುಖ್ಯಮಂತ್ರಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಾಗ, ಶೀಘ್ರದಲ್ಲಿಯೇ ನೇಮಕಾತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರಿಂದ ನಿಯೋಗ ಶಾಂತಗೊಂಡಿತ್ತು. ಕಾಲ ಕಳೆದರೂ ನೇಮಕಾತಿ ಆದೇಶವಾಗದ ಹಿನ್ನೆಲೆ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಹೋರಾಟಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.ಬಿಜೆಪಿಗೆ ಅನುಮತಿ:
ಇತ್ತ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷದ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದಕ್ಕೆ ಪೊಲೀಸರು ಅನುಮತಿ ನೀಡಿದ್ದಾರೆ. ಆದರೆ, ಉದ್ಯೋಗಾಕಾಂಕ್ಷಿಗಳು ಅನುಮತಿ ಕೋರಿ ಮನವಿ ಸಲ್ಲಿಸಿದರೂ ಸ್ಪಂದಿಸದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.ಬಿಗಿ ಬಂದೋಬಸ್ತ್...
ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ಸಾಥ್ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರವೇ ಶ್ರೀನಗರ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಏಳು ಜನ ಡಿವೈಎಸ್‌ಪಿ, 15 ಇನ್‌ಸ್ಪೆಕ್ಟರ್, 20 ಪಿಎಸ್‌ಐ ಸೇರಿದಂತೆ ನೂರಾರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಂಜೆ 6ರ ಸುಮಾರಿಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಶ್ರೀನಗರ ವೃತ್ತಕ್ಕೆ ಆಗಮಿಸಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಶ್ರೀನಗರ, ಜಯನಗರ, ಸಪ್ತಾಪುರ ಸೇರಿ ವಿವಿಧೆಡೆ ತರಬೇತಿ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ಪೊಲೀಸರು ಪ್ರತಿಭಟನೆಗೆ ಬರದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ.ಬಿಜೆಪಿ ಎಷ್ಟು ನೇಮಕ ಮಾಡಿದೆ..?11 ವರ್ಷದಲ್ಲಿ ಕೇಂದ್ರ ಸರ್ಕಾರ ಸರ್ಕಾರ ಎಷ್ಟು ನೇಮಕಾತಿ ಮಾಡಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈ ವರೆಗೆ ಮಾಡಿಲ್ಲ. ನಾವು 45 ಸಾವಿರ ಉದ್ಯೋಗ ಭರ್ತಿ ಮಾಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಎಷ್ಟು ನೇಮಕಾತಿ ಆದೇಶ ಮಾಡಿದ್ದರು ಎನ್ನುವುದನ್ನು ಹೇಳಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಆದರೆ, ಶೀಘ್ರವೇ 65 ಸಾವಿರ ನೇಮಕಾತಿ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅದನ್ನು ಯುವ ಪೀಳಿಗೆ ಅರಿತುಕೊಂಡು ಮುನ್ನಡೆಯಬೇಕು.
ಸಂತೋಷ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ