ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ

KannadaprabhaNewsNetwork | Updated : Jul 18 2024, 12:06 PM IST

ಸಾರಾಂಶ

ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.

ಕಾರವಾರ: ತಾಲೂಕಿನ ಶಿರೂರು ಸಮೇತ ಗುಡ್ಡ ಕುಸಿದು ಜೀವಹಾನಿ ಆಗಿರುವ ಹಿನ್ನೆಲೆ ಐಆರ್‌ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಜೀವಹಾನಿ ಆಗಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಉಸ್ತುವಾರಿ ಸಚಿವರು, ಘಟನೆಗೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಪ್ರಮುಖ ಕಾರಣವಾಗಿದೆ. ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಐಆರ್‌ಬಿ ಕಂಪನಿಯ ಅಧಿಕಾರಿಗಳ ವಿರುದ್ಧ ಪೊಲೀಸ್ ಪ್ರಕರಣ ಮತ್ತು ಗುಡ್ಡ ಕುಸಿತಕ್ಕೆ ಕಾರಣವಾದ ಅರಣ್ಯ ಇಲಾಖೆಯ ಕಾಯ್ದೆಯಡಿ ಎಫ್ಐಆರ್ ದಾಖಲಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದರು.

ರಸ್ತೆ ಕಾಮಗಾರಿಯನ್ನು ಯಾವಾಗ ಮುಕ್ತಾಯಗೊಳಿಸುತ್ತಿರಿ ಎಂಬ ಪ್ರಶ್ನೆಗೆ ಐಆರ್‌ಬಿ ಅಧಿಕಾರಿಗಳು ಸೂಕ್ತ ಉತ್ತರ ನೀಡಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡ ಸಚಿವರು, ಸ್ಪಷ್ಟ ಉತ್ತರ ನೀಡುವವರೆಗೆ ಜಿಲ್ಲಾಡಳಿತದಿಂದ ಯಾವುದೇ ಸಹಕಾರ ನೀಡದಂತೆ ತಿಳಿಸಿದರು.

ಮಳೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲು ವಿಳಂಬ ಮಾಡಬೇಡಿ. ಕಾಳಜಿ ಕೇಂದ್ರದಲ್ಲಿ ಯಾವುದೇ ಕೊರತೆಯಾಗದಂತೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ತಿಳಿಸಿದ ಸಚಿವರು, ಎಲ್ಲ ತಾಲೂಕುಗಳಿಗೆ ಕಾಳಜಿ ಕೇಂದ್ರ ತೆರೆಯಲು ಅನುದಾನದ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.

ಅಣಶಿಯಲ್ಲಿ ಸುರಕ್ಷಿತ ಸಂಚಾರಕಾಗಿ ರಸ್ತೆ ಅಗಲೀಕರಣ ಕೈಗೊಳ್ಳಲು ಲೋಕೋಪಯೋಗಿ ಮತ್ತು ಆರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿ, ಜಾರಿಗೊಳಿಸುವಂತತೆ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಹಾಗೂ ರಾಷ್ಟ್ರೀಯ ಹೆದ್ದಾರಿ ಅರಣ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share this article