ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, 371(ಜೆ) ವಿಶೇಷ ಸ್ಥಾನಮಾನದಡಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಪೈಕಿ ಸುಮಾರು 72 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಬುಧವಾರ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರ ಕಲ್ಯಾಣ ಪಥ ಯೋಜನೆಯಡಿ 1,150 ಕಿ.ಮೀ. ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಒತ್ತು ನೀಡಿದೆ. ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಯುವ ಉದ್ಯೋಗ ಸೇತು ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜನರ ಸಾಮಾಜಿಕ ಮತ್ತು ಆರ್ಥಿಕ ಬದುಕಿಗೆ ನೆರವಾಗುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 3.12 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ₹1,915 ಕೋಟಿಯನ್ನು ಖಾತೆಗಳಿಗೆ ಜಮೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 13.11 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ₹491.47 ಕೋಟಿ ಮೌಲ್ಯದ ಟಿಕೆಟ್ ಸೌಲಭ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಕರ್ಷಕ ಪಥಸಂಚಲನ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ 19 ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
"ಹೈದರಾಬಾದ್ ವಿಮೋಚನೆಯ ಸುತ್ತ-ಮುತ್ತ " ಪುಸ್ತಕ ಬಿಡುಗಡೆ ಮಾಡಲಾಯಿತು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಕೊಪ್ಪಳದ ಜ್ಞಾನಬಂಧು ಸಿಬಿಎಸ್‌ಸಿ ಶಾಲೆ ಮತ್ತು ಕಾಲೇಜು ಹಾಗೂ ಭಾಗ್ಯನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ವಿದ್ಯಾರ್ಥಿಗಳಿಗೆ ಮತ್ತು ಪಥಸಂಚಲನದಲ್ಲಿ ಭಾಗವಹಿಸಿದ ತಂಡಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಿದ್ದರು.
ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಲಾ, ಸಹಾಯಕ ಆಯುಕ್ತರಾದ ಮೆಹಬೂಬ್ ಜೀಲಾನ್ ಖುರೇಶಿ ಉಪಸ್ಥಿತರಿದ್ದರು.