ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದ ಗಡಿ ಹಾಗೂ ವಿಸ್ತೀರ್ಣದ ಗೊಂದಲಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ಸಮಿತಿ ರಚಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ಒಂದು ವರ್ಷದೊಳಗೆ ಅಂತಿಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದ ಗಡಿ ಹಾಗೂ ವಿಸ್ತೀರ್ಣದ ಗೊಂದಲಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ಸಮಿತಿ ರಚಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ಒಂದು ವರ್ಷದೊಳಗೆ ಅಂತಿಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪಿಲಿಕುಳ ನಿಸರ್ಗಧಾಮದಲ್ಲಿ ಅವರು ಭಾನುವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಹಿಂದೆ ವಿಧಾನಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಎಲ್ಲ ಪಕ್ಷಗಳೂ ಬೆಂಬಲ ಸೂಚಿಸಿವೆ. ಆದರೆ, ಈವರೆಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸುವ ಕಾರ್ಯ ನಡೆದಿರಲಿಲ್ಲ. ಈ ಬಾರಿ ಸರ್ಕಾರ ಭೌತಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಈಗಾಗಲೇ ಬಹುತೇಕ ದಾಖಲೆಗಳು ಸರ್ಕಾರದ ಬಳಿ ಇವೆ. ಆದರೂ, ಅಂತಿಮಗೊಳಿಸುವ ಮೊದಲು ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸಿ ವ್ಯತ್ಯಾಸಗಳಿದ್ದರೆ ಸರಿಪಡಿಸಲಾಗುವುದು. ಇದರಿಂದ ಭವಿಷ್ಯದಲ್ಲಿ ಯಾವುದೇ ಗೊಂದಲ ಅಥವಾ ಆಕ್ಷೇಪಗಳಿಗೆ ಅವಕಾಶವಿರುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. .
ಮೇಕೆದಾಟುವಿಗೆ ಬದ್ಧ:
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಯೋಜನೆಗೆ ಅಗತ್ಯವಿರುವ ಸುಮಾರು 13 ಸಾವಿರ ಎಕರೆ ಅರಣ್ಯ ಭೂಮಿಗೆ ಪರ್ಯಾಯ ಭೂಮಿ ಒದಗಿಸಿದರೆ ಮಾತ್ರ ಅದನ್ನು ಬಿಟ್ಟುಕೊಡಲು ಸಾಧ್ಯ. ಯಾವುದೇ ಕಾರಣಕ್ಕೂ ಪರ್ಯಾಯ ಭೂಮಿ ಇಲ್ಲದೆ ಒಂದು ಅಡಿಯಷ್ಟು ಅರಣ್ಯ ಭೂಮಿಯನ್ನೂ ಬೇರೆ ಇಲಾಖೆಗೆ ಅಥವಾ ಖಾಸಗಿ ಉದ್ದೇಶಕ್ಕೆ ನೀಡಲು ಸಾಧ್ಯವಿಲ್ಲ. ಇದು ದೇಶಾದ್ಯಂತ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅರಣ್ಯ ಪ್ರದೇಶಗಳ ಸುತ್ತಲಿನ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದಂತೆ ಕೆಲವೆಡೆ ಒಂದು ಕಿ.ಮೀ. ವ್ಯಾಪ್ತಿ ಅನ್ವಯವಾಗುತ್ತದೆ. ಹಳೆಯ ಗ್ರಾಮಗಳಿರುವ ಪ್ರದೇಶಗಳಲ್ಲಿ ಮಾತ್ರ ನಿಯಮಾವಳಿಗಳ ಪ್ರಕಾರ ವಿನಾಯಿತಿ ಪಡೆದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು. ಇದಕ್ಕೆ ಸಂಬಂಧಪಟ್ಟಂತೆ ವಿಭಾಗೀಯ ಆಯುಕ್ತರ ಅನುಮತಿಯ ಅಗತ್ಯವಿದೆ ಎಂದರು.
100 ಕಡತಗಳ ವಿಲೇವಾರಿ:
ಅರಣ್ಯ ಇಲಾಖೆಗೆ ಸಂಬಂಧಿಸಿದ ರಸ್ತೆ, ವಿದ್ಯುತ್ ಪ್ರಸರಣ ಮಾರ್ಗ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅರಣ್ಯ ಭೂಮಿ ಬಳಕೆಗೆ ಸಂಬಂಧಿಸಿದ ಕಡತಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತದೆ. ಅಂತಿಮ ಅನುಮತಿ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ರಾಜ್ಯ ಸರ್ಕಾರಕ್ಕೆ ನಿಗದಿತ ಕಾಲಮಿತಿಯೊಳಗೆ ಕಡತಗಳನ್ನು ಪರಿಶೀಲಿಸಿ ಶಿಫಾರಸು ಮಾಡುವ ಜವಾಬ್ದಾರಿ ಮಾತ್ರವಿದೆ ಎಂದರು.
ಈ ಹಿಂದೆ ಆಫ್ಲೈನ್ನಲ್ಲಿ ಕಡತಗಳ ವಿಲೇವಾರಿ ನಡೆಯುತ್ತಿದ್ದುದರಿಂದ ವಿಳಂಬವಾಗುತ್ತಿತ್ತು. ಈಗ ಸಂಪೂರ್ಣ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯುತ್ತಿದೆ. ನಾವು ಸಚಿವರಾದ ಬಳಿಕ ಸುಮಾರು 100 ಕಡತಗಳನ್ನು ವಿಲೇವಾರಿ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. 1980ಕ್ಕಿಂತ ಹಿಂದಿನ ಅಸ್ತಿತ್ವದಲ್ಲಿದ್ದ ರಸ್ತೆಗಳಿಗೆ ಸಂಬಂಧಿಸಿದಂತೆ ಮಾತ್ರ ಕೆಲವು ಸಂದರ್ಭಗಳಲ್ಲಿ ಅನುಮತಿ ನೀಡಲು ಅವಕಾಶವಿದೆ ಎಂದರು.
ಕಡಲ್ಕೊರೆತ ತಡೆಗೆ ಕಾಂಡ್ಲಾ ವನ:
ಕಡಲ್ಕೊರೆತ ತಡೆಗೆ ಕಡಲ ತೀರದ ಪ್ರದೇಶಗಳಲ್ಲಿ ಕಾಂಡ್ಲಾ ವನ ಅಭಿವೃದ್ಧಿಪಡಿಸುವ ಯೋಜನೆಗಳ ಕುರಿತು ಮಾತನಾಡಿದ ಅವರು, ಪರಿಸರಕ್ಕೆ ಪೂರಕವಾಗಿರುವ ಇಂತಹ ಯೋಜನೆಗಳನ್ನು ಕೈಗೊಳ್ಳಲು ಸರ್ಕಾರ ಮುಕ್ತವಾಗಿದೆ. ಆದರೆ, ಕೆಲವರು ರಸ್ತೆ ಅಥವಾ ಕಾಂಡ್ಲಾ ವನ ಅಭಿವೃದ್ಧಿಯಿಂದ ಪ್ರವಾಸಿ ತಾಣಗಳ ನೋಟಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಸ್ಥಳೀಯರ ಅಭಿಪ್ರಾಯ ಹಾಗೂ ಪರಿಸರದ ಹಿತವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ನಗರ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆಗೆ ಮಾದರಿಯಾಗುವ ಉದ್ದೇಶದಿಂದ ಅರ್ಬನ್ ಇಕೋ ಫಾರೆಸ್ಟ್ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಸುಮಾರು 17 ಕೋಟಿ ರು.ಗಳ ಪ್ರಸ್ತಾವನೆ ಇದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಯೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಬಳಿಕ ಸಚಿವರು ಪಿಲಿಕುಳ ನಿಸರ್ಗಧಾಮ ವೀಕ್ಷಣೆ ನಡೆಸಿದರು.
ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳಾದ ರವಿಶಂಕರ್, ಕರಿಕಾಳನ್, ಕಮಲಾ, ಪಶು ಸಂಗೋಪನಾ ಅಧಿಕಾರಿ ಡಾ.ಅರುಣ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.