ಸಿ.ಕೆ. ನಾಗರಾಜ ಹೊಸಪೇಟೆ
ಆರೋಗ್ಯ ಸಚಿವ ಯು.ಟಿ.ಖಾದರ್ ಜಿಲ್ಲಾ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತ ಇರಲಿದ್ದಾರೆ.
ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆ ಬೀಳುವ ಕಾಲ ಸನ್ನಿಹಿತವಾಗಿದೆ. ಕೆಲ ವರ್ಷಗಳ ನಿರೀಕ್ಷೆ, ವಿಳಂಬ ಹಾಗೂ ಸಾರ್ವಜನಿಕರ ಒತ್ತಾಯದ ಬಳಿಕ ಆಸ್ಪತ್ರೆ ಜನರ ಸೇವೆಗೆ ಲಭ್ಯವಾಗುತ್ತಿರುವುದು ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ.ಜಿಲ್ಲೆಯ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಖಾಸಗಿ ಆಸ್ಪತ್ರೆ ಅವಲಂಬಿಸಬೇಕಾದ ಪರಿಸ್ಥಿತಿ ಇತ್ತು. ಗಂಭೀರ ಕಾಯಿಲೆ, ತುರ್ತು ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳಿಗಾಗಿ ಬಳ್ಳಾರಿ, ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ದೂರದ ನಗರಗಳಿಗೆ ತೆರಳಬೇಕಾಗಿತ್ತು. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆ ಮಾತ್ರವಲ್ಲದೆ ಸಮಯದ ವ್ಯಯವೂ ಆಗುತ್ತಿತ್ತು.
ಫೆಬ್ರವರಿ ತಿಂಗಳಲ್ಲಿ ನಡೆದ ಹಂಪಿ ಉತ್ಸವದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ಆಗ ಆಸ್ಪತ್ರೆಯ ಕಟ್ಟಡ ಸೇರಿದಂತೆ ಇತರೆ ಕೆಲ ಸೌಲಭ್ಯ ಮಾತ್ರ ಸಿದ್ಧವಾಗಿದ್ದವು. ಆಗ ವೈದ್ಯಕೀಯ ಉಪಕರಣ ಬಂದಿರಲಿಲ್ಲ ಎಂಬ ಕಾರಣಕ್ಕೇ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ತಿಂಗಳು ಉದ್ಘಾಟನೆ ನೆರವೇರಿಸೋಣ ಎಂದುಕೊಂಡಿದ್ದರು. ಆದರೆ ಮುಖ್ಯಮಂತ್ರಿಗಳ ಬದಲಾವಣೆಯಿಂದಾಗಿ ಅನೇಕ ದಿನಗಳಿಂದ ನನೆಗುಂದಿಗೆ ಬಿದ್ದಿದ್ದ ಜಿಲ್ಲಾಸ್ಪತ್ರೆಗೆ ಉದ್ಘಾಟನೆಯ ಭಾಗ್ಯ ದೊರೆತಿರಲಿಲ್ಲ.
ಆಸ್ಪತ್ರೆಯ ಕಟ್ಟಡ ಉದ್ಘಾಟನೆಯಾಗುವುದಷ್ಟೇ ಅಭಿವೃದ್ಧಿಯ ಅಂತಿಮ ಗುರಿಯಾಗಬಾರದು. ಅಗತ್ಯ ತಜ್ಞ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ, ವೈದ್ಯಕೀಯ ಉಪಕರಣ, ಔಷಧ ಹಾಗೂ ನಿರಂತರ ಸೇವಾ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಮುಖ್ಯವಾಗಿದೆ. ಆಸ್ಪತ್ರೆ ಉದ್ಘಾಟನೆಯ ನಂತರವೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ವಿಶೇಷ ಗಮನ ಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಜಿಲ್ಲಾಸ್ಪತ್ರೆ ಉದ್ಘಾಟನೆಗೊಳ್ಳುವ ಮೂಲಕ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯಗಳು ದೊರೆಯಲಿವೆ. ಆಸ್ಪತ್ರೆಗೆ ಬೇಕಾಗುವ ಅಗತ್ಯ ವೈದ್ಯಕೀಯ ಉಪಕರಣಗಳು ಬಂದಿವೆ. ಆಸ್ಪತ್ರೆಗೆ ಬೇಕಾಗುವ ವೈದ್ಯರು ಹಾಗೂ ಸಿಬ್ಬಂದಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದು ವಿಜಯನಗರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಲ್.ಆರ್. ಶಂಕರ್ ನಾಯ್ಕ ತಿಳಿಸಿದ್ದಾರೆ.