- ಜಗಳೂರಿನಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಜೇಶ್ ಆರೋಪ - - - ಕನ್ನಡಪ್ರಭ ವಾರ್ತೆ ಜಗಳೂರು
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಆರ್ಥಿಕ ಸಂಕಷ್ಠಕ್ಕೆ ಒಳಗಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಪೆಟ್ರೋಲ್ ₹೩.೭ ಮತ್ತು ಡೀಸೆಲ್ ₹೩.೯ರಷ್ಟು ಬೆಲೆ ಏರಿಸಿದೆ. ಈ ಮೂಲಕ ರೈತರು ಸೇರಿದಂತೆ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೊರಿಸಿದೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ತಾಲೂಕು ಘಟಕದ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ, ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಎತ್ತಿನಬಂಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೇಳೆ ಅವರು ಮಾತನಾಡಿದರು.
ಸರ್ಕಾರಿ ಆಸ್ತಿ ನೋಂದಣಿ ಶುಲ್ಕ, ಬಿತ್ತನೆಬೀಜ ದರ, ಅಗತ್ಯ ವಸ್ತುಗಳು ಹಾಗೂ ತೈಲ ಬೆಲೆ ಏರಿಕೆಯೊಂದಿಗೆ ಜನವಿರೋಧಿ ನೀತಿಯೊಂದಿಗೆ ಜನಸಾಮಾನ್ಯರ ಬದುಕಿಗೆ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ದಿ ಕಾಮಗಾರಿಗಳು ಮರೀಚಿಕೆಯಾಗುತ್ತಿವೆ. ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದರೆ ಬಿಜೆಪಿ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ:
ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ, ನಾನು ಬಿಜೆಪಿ ಆಡಳಿತಾವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಳಂಕರಹಿತ ಆಡಳಿತ ನಡೆಸಿದ್ದೇನೆ. ಆದರೆ ಕಾಂಗ್ರೆಸ್ ನೇತೃತ್ವದ ಆಡಳಿತ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಆಡಳಿತಕ್ಕೆ ಬಂದು ಒಂದೇ ವರ್ಷದಲ್ಲಿ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ₹೧೮೭ ಕೋಟಿ ಭ್ರಷ್ಟಾಚಾರ ಕೂಪದಲ್ಲಿ ಬಿದ್ದಿದೆ. ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಮಾಜಿ ಜಿಪಂ ಸದಸ್ಯಎಸ್.ಕೆ.ಮಂಜುನಾಥ್, ಮುಖಂಡರಾದ ಎ.ಎಂ. ಮರುಳಾರಾಧ್ಯ, ಜೆ.ವಿ.ನಾಗರಾಜ್, ಬಿಸ್ತುವಳ್ಳಿ ಬಾಬು, ಬಿದರಕೆರೆ ರವಿಕುಮಾರ್, ಬಾಲೇನಹಳ್ಳಿ ಕೆಂಚನಗೌಡ, ಗಡಿಮಾಕುಂಟೆ ಸಿದ್ದೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- - - -೨೨ಜೆಜಿಎಲ್೦೧:ರಾಜ್ಯ ಸರಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಗಳೂರು ಬಿಜೆಪಿ ತಾಲೂಕು ಘಟಕದ ವತಿಯಿಂದ ಎತ್ತಿನ ಬಂಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.