ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಸಂಚಾರ ನಿಯಮ ಉಲ್ಲಂಘನೆಯಂತಹ ಅಪರಾಧಗಳು ಸಂಭವಿಸುತ್ತವೆ.
ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡದು ಮಾಡುವ ಬದಲು, ಸಾರ್ವಜನಿಕರಿಗೆ ಸುಲಭವಾಗಿ ಮುಕ್ತಾಯಗೊಳಿಸಿಕೊಳ್ಳಲು ಕರ್ನಾಟಕ ಸರ್ಕಾರದ ಜೊತೆ ಚರ್ಚಿಸಿ ಈ ರಿಯಾಯಿತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.ಮೇ 2026ಕ್ಕಿಂತ ಮೊದಲು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2022 ರವರೆಗೆ ದಾಖಲಾಗಿರುವ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ಅನ್ವಯವಾಗಲಿದ್ದು, ಸಾರ್ವಜನಿಕರು ನಿಗದಿತ ದಂಡದ ಅರ್ಧದಷ್ಟು ಮೊತ್ತವನ್ನು ಪಾವತಿಸಿ ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದು ಎಂದು ತಿಳಿಸಿದರು.
ರಿಯಾಯಿತಿ ದಂಡ ವಸೂಲಾತಿ ಪ್ರಕ್ರಿಯೆ ಯಶಸ್ವಿಗೊಳಿಸಲು ಜಿಲ್ಲಾ ಪೊಲೀಸ್ ಇಲಾಖೆಯೂ ಕೈಜೋಡಿಸಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಪ್ರಾಧಿಕಾರದ ಜೊತೆ ಪೊಲೀಸ್ ವ್ಯವಸ್ಥೆಯ ನೆರವಿಗಾಗಿ ನಿಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಅದರಲ್ಲೂ ವಿಶೇಷವಾಗಿ ಹೆಚ್ಚು ಜನಸಂದಣಿ ಮತ್ತು ಸಂಚಾರ ಇರುವ ಸ್ಥಳಗಳಲ್ಲಿ ವಿಶೇಷ ಬೂತ್‍ಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ. ಠಾಣಾಧಿಕಾರಿ ಅಥವಾ ತತ್ಸಮಾನ ಅಧಿಕಾರಿಯನ್ನು ನೇಮಿಸಿ ಈ ರಿಯಾಯಿತಿ ದಂಡವನ್ನು ವಸೂಲಿ ಮಾಡಿ, ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿನ ಪರಿಸರ ಸಂರಕ್ಷಣೆ, ಅರಣ್ಯ ಬೆಳೆಸುವುದು ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಮತ್ತು ಸಂರಕ್ಷಣೆಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಕೆರೆಗಳ ಸಂರಕ್ಷಣೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದರಿಂದ ಹಳ್ಳಿಗಳ ಜನರಿಗೆ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಜಾನುವಾರುಗಳಿಗೆ ಅನುಕೂಲವಾಗಲಿದ್ದು, ಕುಡಿಯುವ ನೀರು ಸಮಸ್ಯೆ ನೀಗಿಸಲು ಸಹಕಾರಿಯಾಗಲಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಇದ್ದರು.