ಗದಗ: ನಗರದ ಎಪಿಎಂಸಿ ರಸ್ತೆಯಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಿತ್ರಮಂದಿರದ ಒಳಾಂಗಣ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸತತ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಬೆಂಕಿಯ ತೀವ್ರತೆಗೆ ಚಿತ್ರಮಂದಿರದ ಒಳಗಿದ್ದ ಕುರ್ಚಿಗಳು, ಪರದೆಗಳು, ಸೌಂಡ್ ಸಿಸ್ಟಮ್ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಸಿನಿಮಾ ಪ್ರದರ್ಶನ ಆರಂಭವಾಗಲು ಇನ್ನೂ ಸಮಯವಿದ್ದ ಕಾರಣ ಚಿತ್ರಮಂದಿರದ ಒಳಗೆ ಪ್ರೇಕ್ಷಕರು ಇರಲಿಲ್ಲ. ಒಂದು ವೇಳೆ ಸಿನಿಮಾ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದ್ದರೆ ದೊಡ್ಡ ಮಟ್ಟದ ಪ್ರಾಣಹಾನಿಯಾಗುವ ಸಾಧ್ಯತೆಯಿತ್ತು. ಸದ್ಯಕ್ಕೆ ಬೆಂಕಿ ಅವಘಡದಿಂದ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.