ಬಳ್ಳಾರಿ: ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರ ಜೀವನಕ್ಕೆ ಶಕ್ತಿ ತುಂಬುವ ಯೋಜನೆಗಳಾಗಿವೆ ಎಂದು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಸಂಗನಕಲ್ಲು ಅವರ ಸಹಯೋಗದಲ್ಲಿ “ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ” ಕಾರ್ಯಕ್ರಮದಡಿ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಗ್ರಾಪಂ ನಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಮತ್ತು ಫಲಾನುಭವಿಗಳೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳ ಕುಂದು-ಕೊರತೆಗಳ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಎಂಬ ಮಹಾದಾಸೆಯಾಗಿದೆ. ಅವರ ಆದೇಶದಂತೆ ಪ್ರತಿಯೊಂದು ಗ್ರಾಮದ ಗ್ರಾಪಂ ಮಟ್ಟದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಆಗುವ ಲೋಪದೋಷಗಳು ಹಾಗೂ ಈ ಯೋಜನೆಗಳಿಂದ ಹೊರಗುಳಿದ ಫಲಾನುಭವಿಗಳ ಕುರಿತು ಚರ್ಚಿಸಲು “ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಗ್ಯಾರಂಟಿ ಯೋಜನೆಗಳಿಗೆ ಸುಮಾರು 51 ಸಾವಿರ ಕೋಟಿ ಅನುದಾನ ಖರ್ಚು ಮಾಡಿದ್ದರೂ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಆಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರತಿ ಪಕ್ಷಗಳು ನೀಡುವ ಟೀಕೆಗಳಿಗೆ ಕಿವಿಕೊಡದೇ ಇಂತಹ ಜನಪ್ರಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಇದ್ದ ಹಣವನ್ನು ಶೀಷ್ರದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಬಳ್ಳಾರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ ಮಾತನಾಡಿದರು. ಬಳ್ಳಾರಿ ತಾಪಂ ಇಒ ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಪೀಠಿಕೆ ಬೋಧಿಸಲಾಯಿತು.ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್, ಗ್ರಾಪಂ ಅಧ್ಯಕ್ಷೆ ಗೋವಿಂದಮ್ಮ ನಾಗಿರೆಡ್ಡಿ, ಉಪಾಧ್ಯಕ್ಷೆ ಮಾರೆಕ್ಕ ಹನುಮಂತಪ್ಪ, ಕೆಕೆಆರ್‌ಟಿಸಿ ಸಾರಿಗೆ ಇಲಾಖೆಯ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೋಹನ ಕುಮಾರಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.