ತ್ರೈಮಾಸಿಕ ಕೆಡಿಪಿ ಸಭೆ । ಮಳೆಹಾನಿ ಸಂಬಂಧಿಸಿದಂತೆ ಚರ್ಚೆ
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ನಿರ್ದೇಶನ ನೀಡಿದ್ದಾರೆ.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸುವಂತಾಗಬೇಕು ಎಂದರು.ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ಪ್ರತೀ ವರ್ಷ ನೋಟಿಸ್ ನೀಡುವುದು ಸರಿಯಲ್ಲ. ಆದ್ದರಿಂದ ಪ್ರವಾಹ ಪೀಡಿತ ಕುಟುಂಬಗಳಿಗೆ ಹತ್ತಿರದಲ್ಲಿ ನಿವೇಶನ ಒದಗಿಸಿ ಮನೆ ನಿರ್ಮಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳ ಪಟ್ಟಿ ಮಾಡುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಈ ಬಾರಿ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಆದ್ದರಿಂದ ಕಂದಾಯ, ಪೊಲೀಸ್, ಲೋಕೋಪಯೋಗಿ, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಅಗ್ನಿಶಾಮಕ ಹೀಗೆ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಾ.ಮಂತರ್ ಗೌಡ ತಾಕೀತು ಮಾಡಿದರು.ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಎಷ್ಟು ಮನೆಗಳ ಸ್ಥಳಾಂತರಕ್ಕೆ ಕ್ರಮವಹಿಸಿರುವ ಬಗ್ಗೆ ಗ್ರಾ.ಪಂ.ವಾರು ಮಾಹಿತಿ ಪಡೆದರು.ಈ ಸಂದರ್ಭ ಮಾತನಾಡಿದ ತಾ.ಪಂ. ಇಒ ಶೇಖರ್, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಹೊದ್ದೂರು, ಮೂರ್ನಾಡು, ಕಡಗದಾಳು, ಹಾಗೆಯೇ ಸೂಕ್ಷ್ಮ ಪ್ರದೇಶಗಳಾದ ಮಕ್ಕಂದೂರು, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಸುಮಾರು 342 ಕುಟುಂಬಗಳಿಗೆ ಎಚ್ಚರಿಕಾ ನೋಟಿಸು ನೀಡಲಾಗಿದೆ ಎಂದು ತಿಳಿಸಿದರು.ತಹಸೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರು ಆಯಾಯ ಪ್ರದೇಶದಲ್ಲಿ ಹೊಂದಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಹತ್ತಿರದ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ತೆರಳಲಿದ್ದಾರೆ. ಆ ನಿಟ್ಟಿನಲ್ಲಿ ಮುನ್ನೆಚ್ಚರ ವಹಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಯಾವುದೇ ರೀತಿಯ ಅವಘಡಗಳು ಸಂಭವಿಸುವ ಮೊದಲು ಅಧಿಕಾರಿಗಳು ಎಚ್ಚರ ವಹಿಸುವುದು ಅಗತ್ಯ. ಆದ್ದರಿಂದ ಆಡಳಿತ ವ್ಯವಸ್ಥೆ ನುಣುಚಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಮಳೆ ಮಾಹಿತಿ ನೀಡುವುದರ ಜೊತೆಗೆ ಅಧಿಕಾರಿಗಳು ಸದಾ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.
ಈಗಾಗಲೇ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಆದ್ದರಿಂದ ಹಳೇ ಮರಗಳನ್ನು ತೆರವುಗೊಳಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು.ರಸ್ತೆ ಬದಿ ಕಾಡು ಕಡಿಯುವುದು, ಹಳೇ ಮರಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಗಮನಕ್ಕೆ ತರುವುದು, ಚರಂಡಿ ಸರಿಪಡಿಸುವುದು, ಮತ್ತಿತರ ಕೆಲಸವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗವು ನಿರ್ವಹಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರ ತೆರೆಯಬೇಕು. ಕಾಳಜಿ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ, ಅಡುಗೆ ಮನೆ ಇರಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ಶಾಸಕರು ಸೂಚಿಸಿದರು.ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಚ್ಚು ಹಾನಿತ್ರೈಮಾಸಿಕ ಕೆಡಿಪಿ ಸದಸ್ಯರಾದ ಶ್ಯಾಮ್ ಸುಬ್ಬಯ್ಯ, ಕೊಡಗು ಜಿಲ್ಲೆಯ ಮಕ್ಕಂದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗುತ್ತದೆ. ಹಲವು ಕುಟುಂಬಗಳು ಏಳು ವರ್ಷದಿಂದ ಮನೆ ಕೇಳುತ್ತಿದ್ದಾರೆ. ಇನ್ನೂ ಸಹ ಮನೆ ಒದಗಿಸಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದರು.
ವಿವಿಧ ಇಲಾಖೆಗಳು ಹಳೇ ಮರಗಳನ್ನು ತೆರವುಗೊಳಿಸಲು ಅನುಮತಿ ಕೇಳಿದ್ದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕೂಡಲೇ ಅನುಮತಿ ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.