ಮಡಿಕೇರಿ : ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಕನಸು ಕಟ್ಟಿಕೊಳ್ಳಬೇಕು. ಆ ದಿಸೆಯಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡುವತ್ತ ಗಮನ ಹರಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 2026ನೇ ಸಾಲಿನ ಯುವ ಸಂಸತ್ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವ ಮತ್ತು ಸಂವಿಧಾನದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಿಲನ ಭರತ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಸ್ವಾಗತಿಸಿದರು. ಪವನ್ ಕುಮಾರ್ ನಿರೂಪಿಸಿದರು.
ವಿದ್ಯಾರ್ಥಿಗಳಿಂದ ಸಂಸತ್ ಕಲಾಪ: ಯುವ ಸಂಸತ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣಾ ಪ್ರಕ್ರಿಯೆ, ಜನಪ್ರತಿನಿಧಿಗಳ ಆಯ್ಕೆ, ಸದನದ ಕಲಾಪಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ವಿಧಾನವನ್ನು ಅಣಕು ಸಂಸತ್ ಕಲಾಪದ ಮೂಲಕ ಪ್ರಸ್ತುತಪಡಿಸಿ ಗಮನ ಸೆಳೆದರು.ಪ್ರೌಢಶಾಲೆ, ಪದವಿಪೂರ್ವ, ಪದವಿ, ವೈದ್ಯಕೀಯ, ತಾಂತ್ರಿಕ ಹಾಗೂ ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಹಂತಗಳ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಾಗಿ ಭಾಗವಹಿಸಿ, ಕೊಡಗು ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
ಮುಖ್ಯಮಂತ್ರಿ ಪಾತ್ರ ನಿರ್ವಹಿಸಿದ ಮನೀಶ್ ಪ್ರಭಾಕರ್ ಅವರು ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.