ಕನ್ನಡಪ್ರಭ ವಾರ್ತೆ ಕಾರವಾರ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವೈದ್ಯಕೀಯ ಕಾಲೇಜು ಸೇರಿದಂತೆ ಸಾರ್ವಜನಿಕ ಕ್ರೀಡಾಂಗಣಗಳು, ಬಸ್ ನಿಲ್ದಾಣಗಳು, ಬಸ್ ಡಿಪೋಗಳು, ರೈಲು ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿರುವ ಬೀದಿ ನಾಯಿಗಳ ಸಂಖ್ಯೆಯನ್ನು ನಿಗದಿತ ಕಾಲಾವಧಿಯಲ್ಲಿ ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.ಗುರುತಿಸಲಾಗುವ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ನಿಗದಿತ ಸ್ಥಳದಲ್ಲಿ ಬೇಲಿ ಹಾಕಿ ಅಥವಾ ಕೇಜ್ ಗಳಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವ ಕುರಿತು ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಕ್ರಮ ಕೈಗೊಳ್ಳಬೇಕು, ಈ ಕಾರ್ಯದಲ್ಲಿ ಸಮೀಪದ ಗ್ರಾಮ ಪಂಚಾಯಿತಿಗಳ ಸಹಕಾರವನ್ನು ಪಡೆಯುವಂತೆ ತಿಳಿಸಿದ ಅವರು, ಈ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನೂ ನಡೆಸುವಂತೆ ತಿಳಿಸಿದರು.
ಬೀದಿ ನಾಯಿಗಳ ನಿಯಂತ್ರಣ ವಿಧಾನಗಳು ಮತ್ತು ನಾಯಿ ಕಡಿತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಕುರಿತಂತೆ ಎಲ್ಲ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಯೋಜಿಸುವಂತೆ ಮತ್ತು ಜಿಲ್ಲೆಯಲ್ಲಿ ರೇಬಿಸ್ ಚುಚ್ಚುಮದ್ದುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಮೋಹನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.