ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಪಿಎಂಎಸ್‌ಬಿವೈ (ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ) ನೋಂದಣಿ ಕಾರ್ಯಕ್ರಮವನ್ನು ಪ್ರತಿಕಾ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಪಿಎಂಎಸ್‌ಬಿವೈ (ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ) ನೋಂದಣಿ ಕಾರ್ಯಕ್ರಮವನ್ನು ಪ್ರತಿಕಾ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಕೆನರಾ ಲೀಡ್ ಬ್ಯಾಂಕಿನ ಮುಖ್ಯ ಪ್ರಬಂಧಕ ಹರೀಶ್ ಸಂಘದ ಮಾಸಿಕ ಪತ್ರಿಕೆ ಸನ್ಮತಿಯನ್ನು ಬಿಡುಗಡೆ ಮಾಡಿ ವಿವಿಧ ವಿಮಾ, ಸಾಲ ಯೋಜನೆಗಳ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದಿಂದ ಆಹಾರ ಸಂಸ್ಕರಣೆ ಉದ್ಯಮಕ್ಕಾಗಿ ಸಾಲ ಯೋಜನೆ ಇದ್ದು, ಇದರಲ್ಲಿ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 600 ಆಹಾರ ಸಂಸ್ಕರಣಾ ಘಟಕಗಳು ಈ ಯೋಜನೆಯ ಲಾಭ ಪಡೆದುಕೊಂಡಿವೆ. ಮುದ್ರಾ ಯೋಜನೆಯಲ್ಲಿ 10 ಲಕ್ಷ ರು. ಒಳಗೆ ಸಾಲ ಪಡೆದುಕೊಂಡರೆ ಮತ್ತು ಮಕ್ಕಳ ಉನ್ನತ ಶಿಕ್ಷಣಕ್ಕಾಗಿ 7.50 ಲಕ್ಷ ರು.ವರೆಗಿನ ಅಡಮಾನರಹಿತ ಸಾಲದ ಸೌಲಭ್ಯ ಇದೆ ಎಂದರು.
ಎಟಿಎಂ ಕಾರ್ಡ್ ಹೊಂದಿದವರೂ ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಅವಕಾಶ ಇದೆ. ಮುದ್ರಾ ಸೇರಿದಂತೆ ವಿವಿಧ ಉದ್ಯಮಶೀಲತೆ ಯೋಜನೆಯಲ್ಲಿ ಪ್ರತಿ ವರ್ಷ ಉಡುಪಿ ಜಿಲ್ಲೆಯಿಂದ 3000 ಕೋಟಿ ರೂ. ಸಾಲದ ಗುರಿಯನ್ನು ಎಲ್ಲ ಬ್ಯಾಂಕ್‌ಗಳಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಮೀರಾ ಪೂರಕ ಮಾಹಿತಿಗಳನ್ನು ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಭಾಕರ ಆಚಾರ್ಯ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.