26ರಿಂದ ಕಾಲುಬಾಯಿ ರೋಗ ಲಸಿಕೆ ಅಭಿಯಾನ

KannadaprabhaNewsNetwork |  
Published : Apr 20, 2025, 02:01 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಯಶಸ್ಸಿಗೆ ಪೂರ್ವ ಸಿದ್ಧತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲಾದ್ಯಂತ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಏ.26 ರಿಂದ ಜೂನ್ 9 ರವರೆಗೆ ನಡೆಯಲಿದ್ದು, ಯಶಸ್ವಿಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಜೊತೆಗೆ ಚರ್ಮಗಂಟು ರೋಗದ ಲಸಿಕೆಯನ್ನು ನೀಡಲಾಗುತ್ತಿದೆ. ತಪ್ಪದೇ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಿ, ಆರ್ಥಿಕ ನಷ್ಟ ತಡೆಯಿರಿ ಎಂದು ಹೇಳಿದರು.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್ ಮಾತನಾಡಿ, ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗ. ಇದರಿಂದ ಜಾನುವಾರುಗಳು ಸಾವನ್ನಪ್ಪುವುದಿಲ್ಲವಾದರೂ, ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಹೀಗಾಗಿ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಕಡ್ಡಾಯ ಎಂದರು.

ಜಿಲ್ಲೆಯಲ್ಲಿ 1,76,949 ದನ, 78,654 ಎಮ್ಮೆ ಸೇರಿದಂತೆ ಒಟ್ಟು 2,55,603 ಜಾನುವಾರುಗಳಿದ್ದು, 3,17,587 ಡೋಸ್ ಲಸಿಕೆ ಲಭ್ಯವಿರುತ್ತದೆ. ಒಟ್ಟು 3,390 ಬ್ಲಾಕ್‍ಗಳನ್ನು ಮಾಡಲಾಗಿದೆ. 291 ಲಸಿಕಾದಾರರು ಮನೆ ಬಾಗಿಲಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತರು ಲಸಿಕಾ ಸಿಬ್ಬಂದಿಗಳಿಗೆ ಸಹಕರಿಸಿ ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಫೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಶಿಕ್ಷಣ ಇಲಾಖೆಯ ಚಿದಾನಂದ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಎನ್.ಗಿರಿರಾಜ್, ಡಾ.ಇಂದ್ರಬಾಯಿ, ಡಾ.ರಂಗಪ್ಪ, ಡಾ.ಕಿರಣ್, ಡಾ.ರಂಗಸ್ವಾಮಿ, ಡಾ.ರೇವಣ್ಣ, ಡಾ.ಹರೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!