ಕನ್ನಡಪ್ರಭ ವಾರ್ತೆ ಮಣಿಪಾಲಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.
ಈ ಲಸಿಕಾ ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮನೆಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.
ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ನಿರ್ಲಕ್ಷ್ಯ ಮಾಡಿದ್ದಲ್ಲಿ ಇತರ ಜಾನುವಾರುಗಳಿಗೂ ಕಾಯಿಲೆ ಹರಡುತ್ತದೆ. ಆದ್ದರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.ಲಸಿಕಾ ಕಾರ್ಯಕ್ರಮದ ಬಗ್ಗೆ ಶಾಲೆ, ನಗರಸಭೆ, ಗ್ರಾಮ ಪಂಚಾಯಿತಿ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಹೆಚ್ಚು ಪ್ರಚಾರ ಕೈಗೊಂಡು, ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಪ್ರತಿಶತಃ ನೂರರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮವಹಿಸಬೇಕು ಎಂದರು.