ಕನ್ನಡಪ್ರಭ ವಾರ್ತೆ ಮಣಿಪಾಲ
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ 100 ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅವರು ಬುಧವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 5ನೇ ಸುತ್ತಿನ ಲಸಿಕಾ ಕಾರ್ಯಕ್ರಮದಲ್ಲಿ 2,15,401 ಜಾನುವಾರುಗಳ ಗುರಿ ನಿಗದಿಪಡಿಸಿ, 2, 08, 558 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96.82 ರಷ್ಟು ಪ್ರಗತಿ ಸಾಧಿಸಲಾಗಿದೆ. 6ನೇ ಸುತ್ತಿನಲ್ಲಿ ಇದು ಶೇ 100 ಕ್ಕೆ ತಲುಪಬೇಕು ಎಂದರು.ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅ 21 ರಿಂದ ನ 20 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೆ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಂಗವಾಗಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.ಈ ಸಂದರ್ಭ ಕಾಲುಬಾಯಿ ರೋಗದ ಕುರಿತ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ. ರೆಡ್ಡಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.