ಕನಿಷ್ಠ ವೇತನಕ್ಕೆ ಹೊರಗುತ್ತಿಗೆ ಸಿಬ್ಬಂದಿ ಒತ್ತಾಯ

KannadaprabhaNewsNetwork |  
Published : Jan 21, 2025, 12:31 AM IST
ಸಿಕೆಬಿ-3 ರಾಜ್ಯ ಹಾಸ್ಟಲ್ ಮತ್ತು ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ  ನಡೆಸಿದರು | Kannada Prabha

ಸಾರಾಂಶ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಾರ್ಡನ್‌, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿ ಜಿಲ್ಲಾಡಳಿತ ಭವನದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ರಾಜ್ಯ ಹಾಸ್ಟಲ್ ಮತ್ತು ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಾರ್ಡನ್‌, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರ ಬೇಡಿಕೆ

ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಮಾಸಿಕ ರೂ.31 ಸಾವಿರ ಕೊಡಬೇಕು. ನೇರವಾಗಿ ಇಲಾಖೆಯಿಂದ ವೇತನ ಪಾವತಿಯಾಗಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿ ಆಗಬೇಕು. ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ(ನಿ)ವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ಇಎಸ್ ಐ ಮತ್ತು ಫಿಎಫ್ ಹಣ ತುಂಬಿದ ರಶೀದಿ ಕೊಡಬೇಕು. ಪ್ರತಿ ತಿಂಗಳು 5ನೇ ತಾರೀಕು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು.10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ನೇಮಕಾತಿ ಮಾಡಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದು ಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು ಎಂದರು.

ನಿವೃತ್ತರಿಗೆ ₹10 ಲಕ್ಷ ಇಡುಗಂಟು

ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು.ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು. ವಸತಿ ನಿಲಯ ಮತ್ತು ಹಾಸ್ಟೆಲ್‌ಗಳಿಗೆ ವಾರ್ಡನ್ ರವರು ಮಕ್ಕಳ ಅಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು.

ಚರ್ಚೆಗೆ ದಿನಾಂಕ ನಿಗದಿ ಮಾಡಿ

ಕೆಲವು ಸಮಸ್ಯೆಗಳನ್ನು ಚರ್ಚೆ ಮಾಡಲು ಸಭೆಯ ದಿನಾಂಕವನ್ನು ಜಿಲ್ಲಾಡಳಿತ ನಿಗದಿ ಮಾಡಬೇಕಾಗಿ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ರಾಜ್ಯ ಹಾಸ್ಟಲ್ ಮತ್ತು ಹೊರಗುತ್ತಿಗೆ ನೌಕರರ ಸಂಘದ ತಿರುಮಲೇಶ್, ವೆಂಕಟೇಶ್, ಮುನಿಯಪ್ಪ. ವೆಂಕಟರಾಮಪ್ಪ, ಭಾಗ್ಯಮ್ಮ,ರಾಧಮ್ಮ, ಮಂಜುನಾಥ್, ರವಣಮ್ಮ ಮತ್ತಿತರರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...