ಬೇಡಿಕೆಗೆ ಈಡೇರಿಕೆಗೆ ಗ್ರಾಪಂ ನೌಕರರ ಒತ್ತಾಯ

KannadaprabhaNewsNetwork | Published : Oct 8, 2024 1:08 AM

ಸಾರಾಂಶ

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಳೆದ ಶುಕ್ರವಾರ ಹಾಗೂ ಶನಿವಾರ ಗ್ರಾಪಂ ನೌಕರರು ಧರಣಿ ನಡೆಸಿದ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಾಧವನ್‌ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಅ. 10ರಂದು ಸಂಘದ ಅಧ್ಯಕ್ಷರ ಜೊತೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಸಮಯ ನಿಗದಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಗ್ರಾಮ ಪಂಚಾಯತಿ ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಇಲ್ಲಿಯ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.

ಈ ವೇಳೆ ಗ್ರಾಪಂ ಪಿಡಿಒಗಳ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಮಾತನಾಡಿ, ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ಈಗ ಜಿಲ್ಲಾಮಟ್ಟದಲ್ಲಿ ಧರಣಿ ನಡೆಸಲು ನಿರ್ಧರಿಸಿದ್ದು, ಸೋಮವಾರದಿಂದ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿಗಳ ಮುಂದೆ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿಸಿದರು.

10ರಂದು ಸಚಿವರ ಜತೆ ಚರ್ಚೆ

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಳೆದ ಶುಕ್ರವಾರ ಹಾಗೂ ಶನಿವಾರದಂದು ಧರಣಿ ನಡೆಸಿದ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಾಧವನ್‌ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಅ. 10ರಂದು ಸಂಘದ ಅಧ್ಯಕ್ಷರ ಜೊತೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಮಯ ನಿಗದಿ ಮಾಡಿದ್ದಾರೆ. ಆದರೆ, ಸರ್ಕಾರದಿಂದ ನಮ್ಮ ಬೇಡಿಕೆಗಳ ಬಗ್ಗೆ ಸ್ಪಷ್ಟ ಆದೇಶ ಬರುವತನಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದರು. ರಾಜ್ಯದ ಶೇ. 68 ರಿಂದ 70 ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮಪಂಚಾಯಿತಿ ವತಿಯಿಂದ ಶೇ. 70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸೇರಿ ಎಲ್ಲಾ ಸಿಬ್ಬಂದಿ ವರ್ಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳನ್ನು ಪರಿಹರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಸಂಘದ ಬೇಡಿಕೆಗಳು ಏನು?

ಏಳು ವರ್ಷ ಪೂರೈಸಿರುವ ಪಿಡಿಒಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡುಬೇಕು ಹಾಗೂ ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆ ಪಡೆಬೇಕು. ಪಿಡಿಒ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತಿಕರಿಸಬೇಕು. ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯ ಅನುಷ್ಠಾನ ಗುರಿ ನಿಗದಿ ಕೈಬಿಡುಬೇಕು. ಗ್ರಾಪಂಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಬೇಕು, ತಾಂತ್ರಿಕ ಸಿಬ್ಬಂದಿಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಪಿಡಿಓಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸಿ,ತಜ್ಞರ ಸಮಿತಿ ನೇಮಿಸಿ, ಏಕರೂಪದ ಅಡಿಟ್ ಪದ್ಧತಿ ಜಾರಿಗೊಳಿಸಬೇಕು ಮತ್ತು ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರುವುದು, ಹಾಗೂ ಎಲ್ಲ ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆ ಜಾರಿಗೊಳಿಸ ಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

Share this article