ಆವತಿ ಹೋಬಳಿ ಕಾಫಿ ಬೆಳೆಗಾರರ ಸಂಘ ರಾಜ್ಯ ಸರ್ಕಾರಕ್ಕೆ ಆಗ್ರಹ ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ತೀವ್ರ ಮಳೆ ಕೊರತೆ ಎದುರಿಸುತ್ತಿರುವ ಚಿಕ್ಕಮಗಳೂರು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಆವತಿ ಹೋಬಳಿ ಕಾಫಿ ಬೆಳೆಗಾರರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಪ್ರತಿ ವರ್ಷ ಬೀಳುತ್ತಿದ್ದ ವಾಡಿಕೆ ಮಳೆಯ ಅರ್ಧದಷ್ಟು ಮಳೆಯೂ ಈ ಬಾರಿ ಚಿಕ್ಕಮಗಳೂರು ತಾಲೂಕಿನಲ್ಲಿ ಬಂದಿಲ್ಲ. ಇದರಿಂದಾಗಿ ತಾಲೂಕಿನ ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ಬತ್ತಿವೆ. ಕಾಫಿ, ಮೆಣಸು, ಅಡಿಕೆ, ಭತ್ತ ಸೇರಿದಂತೆ ಎಲ್ಲಾ ಬೆಳೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆರೆಮಕ್ಕಿ ಮಹೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವು ದೊರಕದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ತಾಲೂಕಿನ ಬಯಲುಸೀಮೆಯ ಪ್ರದೇಶಗಳಲ್ಲಿ ಮುಂಗಾರು ಹಂಗಾಮಿನ ಬೆಳೆ ಒಣಗಿ ನಿಂತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹೇಳಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರವಾಗಿದ್ದರೂ ರಾಜ್ಯ ಸರ್ಕಾರ ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿಲ್ಲದಿರುವುದು ಅಚ್ಚರಿ ಮೂಡಿಸಿದೆ. ಪಕ್ಕದ ಮೂಡಿಗೆರೆ ತಾಲೂಕಿನಲ್ಲಿ ಈ ಬಾರಿ 200 ಮಿ.ಮೀ.ಮಳೆಯಾಗಿದೆ. ಶೃಂಗೇರಿ ತಾಲೂಕಿನಲ್ಲೂ ಉತ್ತಮ ಮಳೆಯಾಗಿದೆ ಹಾಗಿದ್ದರೂ ಆ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಚಿಕ್ಕಮಗಳೂರು ತಾಲೂಕನ್ನು ಮಾತ್ರ ಪಟ್ಟಿಗೆ ಸೇರಿಸದೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿಲ್ಲದಿರುವುದು ಖಂಡನೀಯ. ಈ ಕುರಿತು ಸ್ಥಳೀಯ ಶಾಸಕರು ಧ್ವನಿ ಎತ್ತದೇ ನಿರ್ಲಕ್ಷ್ಯವಹಿಸಿರುವುದು ವಿಪರ್ಯಾಸ ಎಂದಿರುವ ಮಹೇಶ್, ರೈತರು ಮತ್ತು ಬೆಳೆಗಾರರ ಹಿತದೃಷ್ಟಿಯಿಂದ ಕೂಡಲೇ ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು, ಮಳೆ ಕೊರತೆಯಿಂದ ನಷ್ಟ ಅನುಭವಿಸಿರುವ ರೈತರು ಮತ್ತು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.