ಚನ್ನಪಟ್ಟಣ: ಹಾಸನ ಪೆನ್‌ಡೈವ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಎಂ, ಡಿಸಿಎಂ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಘೋಷಣೆ ಕೂಗಿ ಖಾಲಿ ಸಿಡಿಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಗಾಂಧಿಭವನದಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿ ತಲುಪಿ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಹಾಸನ ಪೆನ್‌ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ. ಆದರೆ, ಎಸ್‌ಐಟಿ ರಾಜ್ಯ ಸರ್ಕಾರದ ಹಿಡಿತದಲ್ಲಿ ಇರುವುದರಿಂದ ಸೂಕ್ತ ತನಿಖೆ ನಡೆಯುವ ವಿಶ್ವಾಸವಿಲ್ಲ. ಆದ ಕಾರಣ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದರು.
ಪೆನ್‌ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡ ಇರುವುದು ಬೆಳಕಿಗೆ ಬಂದಿದೆ. ರಾಜಕೀಯ ದುರುದ್ದೇಶಕ್ಕೆ ಈ ಪ್ರಕರಣ ಬೆಳಕಿಗೆ ಬರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಮಹಿಳೆಯರ ಮಾನ ಕಳೆದಿದ್ದಾರೆ. ಈ ಪ್ರಕರಣಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರದ ಹಿಡಿತದಲ್ಲಿ ಎಸ್‌ಐಟಿ:
ರಾಜಕೀಯ ತೆವಲಿಗಾಗಿ ಡಿ.ಕೆ.ಶಿವಕುಮಾರ್ ಇಂತಹ ಕೆಲಸ ಮಾಡಿದ್ದಾರೆ. ಪ್ರಕರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ. ಮಹಿಳೆಯರು ಮುಖವನ್ನು ಬ್ಲರ್ ಮಾಡದೇ ವಿಡಿಯೋ ಬಿಡುಗಡೆಯಾಗುವಂತೆ ಮಾಡಿದ್ದಾರೆ. ಈ ಪ್ರಕರಣದ ಹಿಂದಿರುವ ಎಲ್.ಆರ್.ಶಿವರಾಮೇಗೌಡರನ್ನು ಈ ಕೂಡಲೇ ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.