ಮಾದಕ ವಸ್ತುಗಳ ನಿಯಂತ್ರಣಕ್ಕೆ ಅಧಿಕಾರಿಗಳ ತಂಡ ರಚನೆ

KannadaprabhaNewsNetwork | Published : Jul 4, 2024 1:05 AM

ಸಾರಾಂಶ

ಮಾದಕ ವಸ್ತುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಭಾಗವಹಿಸಿದ್ದರು.

ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಡಿಸಿ ವೆಂಕಟೇಶ್‌ ಸೂಚನೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮಾದಕ ವಸ್ತುಗಳ ನಿಯಂತ್ರಣ ದಿಸೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಅಧಿಕಾರಿಗಳ ತಂಡ ರಚಿಸಿ, ನಿಯಮಿತವಾಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಮಾದಕ ವಸ್ತುಗಳ ನಿಯಂತ್ರಣ ಕುರಿತಂತೆ ಪೊಲೀಸ್ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಸ್ಟೆಲ್, ಕಾಲೇಜು ಕ್ಯಾಂಪಸ್ ಮಾತ್ರವಲ್ಲದೇ ಕಾಲೇಜು ಕ್ಯಾಂಪಸ್ ಹೊರಗಡೆಯೂ ಪೆಟ್ಟಿಗೆ ಅಂಗಡಿ ಸೇರಿದಂತೆ ಕೆಲವು ನಿರ್ಧಿಷ್ಟ ಸ್ಥಳಗಳ ಅಡ್ಡಗಳ ಮೇಲೆಯೂ ತೀವ್ರ ನಿಗಾ ವಹಿಸಬೇಕು. ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಎನ್‍ಎಸ್‍ಎಸ್ ಜಿಲ್ಲಾ ಬೋಧಕ ಲೋಕೇಶ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಭರತ್ ಮಾತನಾಡಿದರು.

ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share this article