ಜಲಾಶಯ ಭರ್ತಿಯಾಗಿದ್ದರೂ ಬೆಳೆಗಳಿಗೆ ನೀರು ಬಿಡುತ್ತಿಲ್ಲ ಎಂದು ರೈತರು ಆರೋಪ
ತಾಲೂಕಿನ ಉಡುತೊರೆ ಜಲಾಶಯದ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ನೀರು ಬಿಡದಿರುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.4 ರಂದು ಅಜ್ಜೀಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜಾದ್ ಖಾನ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಸರ್ಕಾರ ಅಜ್ಜೀಪುರ ರಾಮಾಪುರ ಕೌದಳ್ಳಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲ ಕಲ್ಪಿಸಲು ಕೋಟ್ಯಂತರ ರುಪಾಯಿ ವೆಚ್ಚ ಮಾಡಿ ಉಡುತೊರೆ ಜಲಾಶಯ ನಿರ್ಮಾಣ ಮಾಡಲಾಗಿದೆ. ಕಳೆದ ಎರಡು ವರ್ಷಗಳ ಕಾಲ ಸತತ ಬರಗಾಲವಿದ್ದರಿಂದ ರೈತರು ತೀವ್ರ ತೊಂದರೆ ಅನುಭವಿಸಿದ್ದಾರೆ. ವರುಣನ ಕೃಪೆಯಿಂದ ಕಳೆದ ಒಂದು ತಿಂಗಳಿನಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಅಣೆಕಟ್ಟೆ ಭರ್ತಿಯಾಗುತ್ತಿದೆ. ಆದರೆ ಮುಖ್ಯ ಕಾರ್ಯಗಳಲ್ಲಿ ಕಸ ಕಡ್ಡಿಗಳು, ಗಿಡಗಂಟಿಗಳು ಬೆಳೆದಿರುವುದರಿಂದ ಕೊನೆಯ ಭಾಗದವರೆಗೆ ಜಲಾಶಯ ನೀರು ತಲುಪುತ್ತಿಲ್ಲ. ಈ ಸಂಬಂಧ ಅಧಿಕಾರಿಗಳಿಗೆ ಮುಖ್ಯ ಕಾಲುವೆ ದುರಸ್ತಿ ಪಡಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ ಖಂಡಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ಭಕ್ತಾದಿಗಳಿಗೆ ಅರಣ್ಯ ಇಲಾಖೆ ವತಿಯಿಂದ 200 ರುಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಅರಣ್ಯ ಇಲಾಖೆಯವರು ತೊಂದರೆ ಕೊಡುತ್ತಿದ್ದಾರೆ. ಆದರೆ ಚಾರಣದ ಹೆಸರಿನಲ್ಲಿ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ? ಭಕ್ತಾದಿಗಳಿಂದ ಹಣ ವಸೂಲಿ ಮಾಡಿ ಏನು ಸಾಧನೆ ಮಾಡಬೇಕು. ಈ ಕೂಡಲೇ ಸಂಬಂಧಪಟ್ಟ ಅರಣ್ಯ ಸಚಿವರು ಈ ಆದೇಶವನ್ನು ಹಿಂಪಡೆಯಬೇಕು, ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯವರು ತಾಳುಬೆಟ್ಟದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಂದ ಹಣ ವಸೂಲಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ, ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕರು ಸಹ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ನಡೆಸಿ ಅರಣ್ಯ ಇಲಾಖೆ ವತಿಯಿಂದ ಹಣ ಪಡೆಯುತ್ತಿರುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.