ಕುಡಿಯುವ ನೀರು ಬಳಕೆಗೆ ಕ್ರಿಯಾ ಯೋಜನೆ ರೂಪಿಸಿ

KannadaprabhaNewsNetwork |  
Published : Nov 19, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಮಲಪ್ರಭಾ ಜಲಾಶಯದಲ್ಲಿ ಪ್ರಸ್ತುತ ಶೇ.49.5ರಷ್ಟು ನೀರು ಲಭ್ಯವಿದ್ದು, ಮುಂದಿನ ಜುಲೈ 2027 ರವರೆಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಲಪ್ರಭಾ ಜಲಾಶಯದಲ್ಲಿ ಪ್ರಸ್ತುತ ಶೇ.49.5ರಷ್ಟು ನೀರು ಲಭ್ಯವಿದ್ದು, ಮುಂದಿನ ಜುಲೈ 2027 ರವರೆಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಜಿಲ್ಲೆಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ನಿಖರವಾಗಿ ಅಂದಾಜಿಸಿ, ಬೇಡಿಕೆಗೆ ಅನುಗುಣವಾಗಿ ನೀರು ಪಡೆಯಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಮುಂದಿನ ಜುಲೈ 2027ರವರೆಗೆ ಜನರು ಮತ್ತು ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಕುಡಿಯಲು ನೀರನ್ನು ಕಾಯ್ದಿರಿಸುವ ಉದ್ದೇಶದಿಂದ ಅನಧಿಕೃತ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ, ಗ್ರಾಪಂಗಳಲ್ಲಿ ಲಭ್ಯವಿರುವ ಟ್ಯಾಂಕರ್‌ಗಳ ಮೂಲಕ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರು ಸರಬರಾಜು ಮಾಡಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಮುಂಚಿತವಾಗಿಯೇ ಟೆಂಡರ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅದೇ ರೀತಿ ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಪರಿಸ್ಥಿತಿ ಎದುರಾದಲ್ಲಿ ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಮೇವು ಪೂರೈಕೆಗಾಗಿ ಮುಂಚಿತವಾಗಿ ಟೆಂಡರ್ ಕರೆಯುವ ಕುರಿತು ಸಭೆಯಲ್ಲಿ ತಿಳಿಸಿದರು.

ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ