ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ 4 ತಾಸು ರಸ್ತೆ ತಡೆ

KannadaprabhaNewsNetwork |  
Published : Oct 10, 2026, 02:15 AM IST
ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ಕುಷ್ಟಗಿಯ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ಕುಷ್ಟಗಿಯ ಬಸವೇಶ್ವರ ವೃತ್ತದಲ್ಲಿ ನಾಲ್ಕು ತಾಸು ರಸ್ತೆ ತಡೆ, ಧರಣಿ, ಪ್ರತಿಭಟನೆ ಮಾಡಿದರು.

ಕುಷ್ಟಗಿ: ಮುಂಗಾರು ಮಳೆಯ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ಕುಷ್ಟಗಿಯ ಬಸವೇಶ್ವರ ವೃತ್ತದಲ್ಲಿ ನಾಲ್ಕು ತಾಸು ರಸ್ತೆ ತಡೆ ನಡೆಸಿ ಧರಣಿ ಪ್ರತಿಭಟನೆ ಮಾಡಿದರು. ಬಳಿಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಬೆಳೆ ನಷ್ಟದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿಂದೆ ಧರಣಿ, ಸತ್ಯಾಗ್ರಹ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಪಾದಯಾತ್ರೆಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದರೂ, ರೈತರ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರ ಅಧ್ಯಯನ ತಂಡಗಳನ್ನು ಕಳುಹಿಸಿ ಬೆಳೆ ಹಾನಿ ಪರಿಶೀಲನೆ ನಡೆಸುವುದಕ್ಕಷ್ಟೇ ಸೀಮಿತವಾಗಬಾರದು. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ವಿತರಿಸಿ, ಅವರ ಸಮಸ್ಯೆಗಳಿಗೆ ವಿಳಂಬವಿಲ್ಲದೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಪ್ರಮುಖ ಬೇಡಿಕೆಗಳು: ನಾಶವಾದ ಬೆಳೆಗಳಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡಬೇಕು. ಕುಷ್ಟಗಿ ತಾಲೂಕಿನ 36 ಕೆರೆಗಳಿಗೆ ನೀರು ತುಂಬಿಸಬೇಕು. ಪ್ರತಿ ಗ್ರಾಪಂಗೊಂದು ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಬೇಕು. ಬೆಳೆ ವಿಮೆ ಮಾಡಿಸಿದ ಎಲ್ಲ ರೈತರಿಗೆ ಪೂರ್ಣ ಪ್ರಮಾಣದ ವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪಟ್ಟಣ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಿ ರೈತರು ಹಾಗೂ ಕೃಷಿ ಕೂಲಿಕಾರರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಕೂಲಿಯನ್ನು ದಿನಕ್ಕೆ ₹1,000ಕ್ಕೆ ಹೆಚ್ಚಿಸಿ, ವಾರ್ಷಿಕ ಮಾನವ ದಿನಗಳನ್ನು 200ಕ್ಕೆ ಏರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ಬೇಡಿಕೆ ಈಡೇರದಿದ್ದರೆ ಅಮರಣಾಂತ ಉಪವಾಸ: ಸರ್ಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಧರಣಿ, ಸತ್ಯಾಗ್ರಹ ಹಾಗೂ ಅಮರಣ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅವರು ರೈತರ ಮನವಿ ಸ್ವೀಕರಿಸಿದರು. ರೈತ ಸಂಘದ ತಾಲೂಕು ಉಪಾಧ್ಯಕ್ಷೆ ಅಕ್ಕಮ್ಮ ಮರೆಗೌಡರ, ಹನುಮೇಶ ಶಾಖಾಪೂರ, ಮಲ್ಲಿಕಾರ್ಜುನಗೌಡ, ನಜೀರಸಾಬ ಮೂಲಿಮನಿ, ಮಲ್ಲಿಕಾರ್ಜುನ ದೋಟಿಹಾಳ, ಬಸವರಾಜ ಮೇಳಿ, ರಾಮಣ್ಣ ಭಾವಿಕಟ್ಟಿ, ಅಡಿವೆಪ್ಪ ನೆರೆಬೆಂಚಿ ಪಾಲ್ಗೊಂಡಿದ್ದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡು ಕಂಡ ಅಪ್ರತಿಮ ಶಿವಯೋಗಿಗಳಲ್ಲಿ ಕುಮಾರ ಶಿವಯೋಗಿಗಳು ಒಬ್ಬರು: ಶೇಖರಯ್ಯ ಶಾಸ್ತ್ರೀಗಳು
ಬೆಣಚಮಟ್ಟಿ ಗ್ರಾಮದ ಕೆರೆಯಲ್ಲಿ ಅಕ್ರಮ ಮರಳುಗಾರಿಕೆ