ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅದ್ಯತೆ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುತ್ತಿರುವುದು ಅತ್ಯುತ್ತಮ ಯೋಜನೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಸ್ಮಾರ್ಟ್‌ಕಾರ್ಡ್ ವಿತರಿಸುವ ಕಾರ್ಯಕ್ಕೆ ಚಾಲನೆ
---
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅದ್ಯತೆ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುತ್ತಿರುವುದು ಅತ್ಯುತ್ತಮ ಯೋಜನೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಹೇಳಿದರು.
ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಗೆ ಸಾಂಕೇತಿಕವಾಗಿ ಸ್ಮಾರ್ಟ್‌ಕಾರ್ಡ್ ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕಳೆದ 3 ವರ್ಷಗಳಿಂದ ನಮ್ಮ ಸರ್ಕಾರ ಪಂಚ ಗ್ಯಾರಂಟಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ರಾಜ್ಯದ ಸ್ತ್ರೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಈಗ ನಮ್ಮ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಯೋಜನೆಯನ್ನು ಪ್ರಕಟಿಸಿದರು. ಇದನ್ನು ಸಾರಿಗೆ ಸಚಿವ ಬೈರತಿ ಸುರೇಶ್ ಜೂ.೧೨ರಿಂದಲೇ ಕರ್ನಾಟಕ ಒನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವ್ಯವಸ್ಥೆಯ ಮಾಡಿರುವುದು ನಮ್ಮ ಸರ್ಕಾರದ ಸಾಧನೆ ಮತ್ತು ಬದ್ಧತೆಯನ್ನು ತೋರಿಸುತ್ತಿದೆ ಎಂದು ಕೊಂಡಾಡಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ನಮ್ಮ ಜಿಲ್ಲೆಯಿಂದ ೯ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಣ ಕೊಟ್ಟು ಪಾಸ್ ಪಡೆದು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದರು. ಈ ವರ್ಷದಿಂದ ಗಂಡು ಮಕ್ಕಳಿಗೆ ಆ ಹಣ ಉಳಿತಾಯವಾಗುತ್ತಿದೆ. ಗಂಡು ಮಕ್ಕಳ ತಂದೆ ತಾಯಿಂದಿರು ನೆಮ್ಮದಿಯಿಂದ ಸಂಸಾರ ನಿಭಾಯಿಸಲು ಸಾಧ್ಯವಾಗಿದೆ. ನಾವೆಲ್ಲರು ಎಲ್ಲೆ ಹೋದರು ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಿ ಎಂಬ ಮನವಿ ಬರುತ್ತಿತ್ತು. ಈಗ ಸಾಕಾರವಾಗಿದೆ ಎಂದುತಿಳಿಸಿದರು.
ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜ ಮಾತನಾಡಿ, ರಾಜ್ಯ ಸರ್ಕಾರ ಯೋಜನೆಯನ್ನು ನಿನ್ನೆಯಿಂದಲೇ ಜಾರಿ ಮಾಡಿದೆ. ಜಿಲ್ಲೆಯ ವ್ಯಾಪ್ತಿಯ ಕರ್ನಾಟಕ ಒನ್ ಕೇಂದ್ರದಲ್ಲಿ ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಸ್ಮಾರ್ಟ್‌ಕಾರ್ಡುಗಳನ್ನು ಉಚಿತವಾಗಿ ಪಡೆದು ಸಾರಿಗೆ ಬಸ್‌ನಲ್ಲಿ ತಮ್ಮ ವಾಸ ಸ್ಥಳದಿಂದ ಕಾಲೇಜಿಗೆ ಹೋಗುವ ಮಾರ್ಗದವರೆಗೆ ಹಾಗೂ ಕನಿಷ್ಟ ೬೦ ಕಿ.ಮೀ. ಮೀರದಂತೆ ಉಚಿತ ಬಸ್ ಪಾಸ್‌ಗಳನ್ನು ವಿತರಣೆ ಮಾಡುತ್ತಿದ್ದೇವೆ. ಇದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಈಗಾಗಲೇ ಹಣ ಕೊಟ್ಟು ಪಾಸ್ ಪಡೆದುಕೊಂಡ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ನಂಬರ್ ನೀಡಿದರೆ ಆ ಹಣವನ್ನು ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಳಿಗಿರಿ ರಂಗನಬೆಟ್ಟದ ವ್ಯವಸ್ಥಾಪನಾ ಮಂಡಲಿಯ ಅಧ್ಯಕ್ಷ ರಾಜಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ಪಿ. ಮಾದೇಶ್, ವಿಭಾಗೀಯ ಸಾರಿಗೆ ಅಧಿಕಾರಿ ಪರಮೇಶ್ವರಪ್ಪ, ಸಹಾಯಕ ಟ್ರಾಫಿಕ್ ಇನ್ಸ್‌ಪೆಕ್ಟರ್ ನೀಲಮ್ಮ, ಆಪ್ತ ಸಹಾಯಕಿ ಚಂದ್ರಮಣಿ ಹಾಗೂ ವಿದ್ಯಾರ್ಥಿಗಳು ಇದ್ದರು.
---
13ಸಿಎಚ್ಎನ್10
ಚಾಮರಾಜನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಉಚಿತ ಬಸ್ ಪಾಸ್ ಶನಿವಾರ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಸಾಂಕೇತಿಕವಾಗಿ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.